- ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ
- ಜುಲೈ 3 ರಂದು ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ
- ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ.
ದಾವಣಗೆರೆ : ನೂತನ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ. ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಆಯವ್ಯಯದ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡಬೇಕು. ಸಚಿವ ಸಂಪುಟ ಸಭೆಯಲ್ಲಿ ಇನ್ನು ಬಜೆಟ್ ಗಾತ್ರದ ನಿರ್ಧಾರ ಆಗಿಲ್ಲ. ಚರ್ಚಿಸಿ ನಿರ್ಧಾರ ತಿಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇನ್ನು ಗೋಹತ್ಯೆ ನಿಷೇಧ ಕುರಿತಂತೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. 1964ರ ಆ್ಯಕ್ಟ್‌ನಲ್ಲಿ 12 ವರ್ಷ ತುಂಬಿರುವ ರಾಸುಗಳು, ವಯಸ್ಸಾಗಿರುವ ಜಾನುವಾರುಗಳು, ಬರಡು ರಾಸುಗಳು, ವ್ಯವಸಾಯಕ್ಕೆ ಉಪಯೋಗವಿಲ್ಲದ ರಾಸುಗಳು ಬಗ್ಗೆ ಸ್ಪಷ್ಟವಾಗಿ ಹೇಳಿದೆ. ಪಶುಸಂಗೋಪನಾ ಸಚಿವರು ಹೇಳುವಾಗ ಸರಿಯಾಗಿ ಮಾಹಿತಿ ನೀಡಿಲ್ಲ. ಕೆಲ ತಿದ್ದುಪಡಿಗಳನ್ನು ಬಿಜೆಪಿ ಸರ್ಕಾರ ಮಾಡಿತ್ತು. ಮತ್ತೆ ಏನಾಗಿದೆ ಎಂಬ ಕುರಿತಂತೆ ಸಮಗ್ರ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.