ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಕರ್ತವ್ಯವನ್ನು ಭಯ, ಪಕ್ಷಪಾತ ಇಲ್ಲದೆ, ಎಲ್ಲರಿಗೂ ಸಂವಿಧಾನಕ್ಕೆ ಅನುಸಾರವಾಗಿ ನ್ಯಾಯವಾದುದನ್ನೇ ಕರ್ತವ್ಯ ನಿರ್ವಹಣೆ ಮಾಡುತ್ತೇನೆ ಎನ್ನುವ ಮೂಲಕ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು. ಬಳಿಕ ಪತ್ರಗಳಿಗೆ ಸಹಿ ಹಾಕುವ ಮೂಲಕ ಅಧಿಕೃತವಾಗಿ ರಾಜ್ಯದ ಮುಖ್ಯಮಂತ್ರಿಯಾದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಕೆಪಿಸಿಸಿ ಅಧ್ಯಕ್ಷ, ಕನಕಪುರ ಕ್ಷೇತ್ರದ ಶಾಸಕ ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ ಪರಮೇಶ್ವರ್ ಅವರು ಮೊದಲ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿರುವ, ದೇವನಹಳ್ಳಿ ಕ್ಷೇತ್ರದ ಶಾಸಕ ಕೆ.ಎಚ್ ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಿರಿಯ ರಾಜಕಾರಣಿ ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಬಬಲೇಶ್ವರ ಕ್ಷೇತ್ರದ ಶಾಸಕ, ಎಂ.ಬಿ ಪಾಟೀಲ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಿರಿಯ ರಾಜಕಾರಣಿ, ಕೆಪಿಸಿಸಿ ಕಾರ್ಯಾಧ್ಯಕ್ಷ, ಬಿ.ಟಿ.ಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರು ಅಲ್ಲಾಹ್ ಮತ್ತು ತನ್ನ ತಾಯಿಯ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಇಂಗ್ಲೀಶ್ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಬಿಹಾರ್ ಮುಖ್ಯಮಂತ್ರಿ, ನಿತೀಶ್ ಕುಮಾರ್, ಶರದ್ ಪವಾರ್, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ, ತಮಿಳುನಾಡು ಮುಖುಮಂತ್ರಿ ಎಂಕೆ ಸ್ಟಾಲಿನ್; ಫಾರೂಕ್ ಅಬ್ದುಲ್ಲಾ , ಮೆಹಬೂಬಾ ಮುಫ್ತಿ, ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.