ಬೆಂಗಳೂರು : ಹಿಜಾಬ್ ನಿರ್ಬಂಧಿಸಿದ್ದ ಕೆಲವು ಕಾಲೇಜುಗಳ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿಗೆ ಸರಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ಈಗಾಗಲೇ ಹೈಕೋರ್ಟ್‍ನಲ್ಲಿ ಪೂರ್ಣಗೊಂಡಿದ್ದು, ತೀರ್ಪು ಮಂಗಳವಾರ (ಇಂದು) 10:30 ಕ್ಕೆ ಪ್ರಕಟಗೊಳ್ಳಲಿದೆ.
ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠ ತೀರ್ಪು ನೀಡಲಿದೆ. ಹಾಗಾಗಿ ಈಗ ಎಲ್ಲರ ಚಿತ್ತ ‘ಹೈ’ ತೀರ್ಪಿನತ್ತ ಬಿದ್ದಿದೆ.
11 ದಿನ ವಿಚಾರಣೆ : ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನ ತ್ರಿಸದಸ್ಯ ನ್ಯಾಯಪೀಠದಲ್ಲಿ ಉಡುಪಿಯ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಷಮ್ ಹಾಗೂ ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿದ್ದ 9 ರಿಟ್ ಅರ್ಜಿಗಳು ಹಾಗೂ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ರಿಟ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಝೈಬುನ್ನೀಸಾ ಮುಹಿಯುದ್ದೀನ್ ತ್ರಿಸದಸ್ಯ ನ್ಯಾಯಪೀಠ ಸತತ 11 ದಿನಗಳ ಕಾಲ ವಿಚಾರಣೆ ನಡೆಸಿ, ವಾದ ಮುಕ್ತಾಯಗೊಳಿಸಿ ತೀರ್ಪುನ್ನು ಕಾಯ್ದಿರಿಸಿತ್ತು.
ಶಾಲಾ ಕಾಲೇಜುಗಳಿಗೆ ರಜೆ : ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಲ್ಲದೆ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉಡುಪಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ಮತ್ತು ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಕೂಡ ಇಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ರಾಯಚೂರು, ಮೈಸೂರು, ಮಂಡ್ಯ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಂದು ವಾರ ನಿಷೇಧಾಜ್ಞೆ : ಇನ್ನು ಬೆಂಗಳೂರಿನ ಎಲ್ಲಾ ಡಿಸಿಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಲ್ ಪಂತ್ ಸಂವಾದ ನಡೆಸಿದ್ದು ಸಭೆ ಬಳಿಕ ಎಲ್ಲಾ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚಿಸಿದ್ದಾರೆ. ನಾಳೆ ತೀರ್ಪು ಹಿನ್ನೆಲೆ ಅಗತ್ಯ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ. ಶಾಲಾ ಕಾಲೇಜುಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಹೈ ಅಲರ್ಟ್ ಹಾಗೂ ಹೆಚ್ಚಿನ ಬಂದೋಬಸ್ತ್ ಮಾಡಿಕೊಳ್ಳುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಂದು ವಾರ ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಆದೇಶ ನೀಡಿದ್ದಾರೆ.