ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಎಳೆಯಲಾಗಿದೆ. ‘ಹೈ’ ಅಲರ್ಟ್ ನೊಂದಿಗೆ ಹಗ್ಗ ಜಗ್ಗಾಟ ಕೊನೆಗೊಂಡಿದೆ.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖಗೆಯವರರು ನಿರಂತರ ಸಭೆಗಳನ್ನು ನಡೆಸಿ, ಅವರಿಬ್ಬರನ್ನು ಸಮಾಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದು ಕುಳಿತಿದ್ದ ಡಿ.ಕೆ.ಶಿವಕುಮಾರ್ ಉಪ ಮುಖ್ಯ ಮಂತ್ರಿಯ ಸ್ಥಾನಕ್ಕೆ ಒಪ್ಪಿಕೊಂಡಿದ್ದಾರೆ.
ಈ ಕುರಿತು ಇಂದು ಎಐಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅಧಿಕೃತ ಘೋಷಣೆ ಮಾಡಿದರು.
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವೇಣುಗೋಪಾಲ್ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಭಾರತ್ ಜೋಡೋ ಯಾತ್ರೆ ಕಾರಣ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್ ಸಾಕಷ್ಟು ಶ್ರಮವಹಿಸಿದೆ ಎಂದರು.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಬಗ್ಗೆ ಒನ್ ಟು ಒನ್ ಚರ್ಚೆ ನಡೆಯಿತು. ಮೊದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಯಿತು. ಅಂತಿಮವಾಗಿ ಸಿದ್ದರಾಮಯ್ಯನವರನ್ನು ಸಿಎಂ ಆಗಿ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಡಿಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕಕ್ಕೆ ಒಂದೇ ಡಿಸಿಎಂ ಹುದ್ದೆ. ಒಬ್ಬರು ಮಾತ್ರ ಉಪಮುಖ್ಯಮಂತ್ರಿಯಾಗಿರುತ್ತಾರೆ. ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯುತ್ತಾರೆ ಎಂದು ಹೇಳಿದರು.
ಮೇ 20ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.