ಬೆಂಗಳೂರು: ಭಾರೀ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 3 ದಿನಗಳಲ್ಲಿ ಕರ್ನಾಟಕದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
ರಾಮನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಳೆನೀರು ನದಿಯಂತೆ ಹರಿಯುತ್ತಿದೆ. ಇದರಿಂದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇಂದು ಕೂಡ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು 40-50 ಕಿ.ಮೀ ವೇಗದಲ್ಲಿರುವ ಗಾಳಿ, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮೈಸೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಿಂದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ 3 ದಿನ ಜೋರಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಿಗೆ ಸೆ.2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.