‘ಭಾರತದ ಜನತೆಯಾದ ನಾವು’ | ಸಂವಿಧಾನ ಪೀಠಿಕೆ ಓದಿದ ಕರ್ನಾಟಕ

ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಕಾರ್ಯಕ್ರಮ ಶುಕ್ರವಾರ ನಡೆಯಿತು. ವಿಧಾನಸೌಧದ ಮೆಟ್ಟಿಲ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಲಕ್ಷಾಂತರ ನಾಗರಿಕರು ಭಾರತ ಸಂವಿಧಾನದ ಪೀಠಿಕೆಯನ್ನು ಓದಿದ್ದು, ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿದೆ.

ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ನಾಡಗೀತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿದರು. ಸಂವಿಧಾನ ಪೀಠಿಕೆ 

ಇದನ್ನೂ ಓದಿ: ಕಲ್ಲಿದ್ದಲು ಬಿಕ್ಕಟ್ಟು ಎಂಬುದು ಒಂದು ಹಗರಣವಲ್ಲದೆ ಬೇರೇನೂ ಅಲ್ಲ -ವಿದ್ಯುತ್‍ ಮತ್ತು ಕಲ್ಲಿದ್ದಲು ಕಾರ್ಮಿಕರ ಸಂಘಟನೆಗಳ ಆರೋಪ

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಸಂವಿಧಾನದ ಪೀಠಿಕೆ ವಾಚನವು ಮೂಲಭೂತ ಹಕ್ಕುಗಳು, ಪತ್ರಿಕಾ ಸ್ವಾತಂತ್ರ್ಯ, ಕೋಮು ಸೌಹಾರ್ದತೆ ಮತ್ತು ಪ್ರತಿ ಜೀವನದ ಘನತೆಯ ಅರಿವು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ” ಎಂದು ಹೇಳಿದರು.

“We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ” ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಕ್ರಮ: ಸಚಿವ ಕೃಷ್ಣ ಭೈರೇಗೌಡ

“ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ. ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿದೆ” ಎಂದು ಅವರು ಹೇಳಿದರು.

ಕೇಂದ್ರದ ಬಿಜೆಪಿ ಸರ್ಕಾರವು ಭಾರತದ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಎಂದು ಹೋರಾಟಗಾರರು ಮತ್ತು ವಿರೋಧ ಪಕ್ಷಗಳು ನಿರಂತರವಾಗಿ ಆರೋಪಿಸುತ್ತಿರುವ ವೇಳೆ ರಾಜ್ಯ ಸರ್ಕಾರದ ಈ ಕಾರ್ಯಕ್ರಮ ಬಹಳ ಪ್ರಾಮುಖ್ಯತೆ ಪಡದಿದೆ.

ಬ್ಯಾಂಕ್ ಮತ್ತು ಕಾರ್ಪೊರೇಟ್ ಉದ್ಯೋಗಿಗಳನ್ನು ಒಳಗೊಂಡಂತೆ ಒಟ್ಟು 2.31 ಕೋಟಿ ವ್ಯಕ್ತಿಗಳು ಭಾರತೀಯ ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮಕ್ಕೆ ನೋಂದಾಯಿಸಿಕೊಂಡಿದ್ದರು ಎಂದು ವರದಿಯಾಗಿದೆ. ರಾಜ್ಯದಾದ್ಯಂತ ಶಾಲಾ-ಕಾಲೇಜುಗಳು, ಸರ್ಕಾರಿ ಕಛೇರಿಗಳು, ಮುಖ್ಯಮಂತ್ರಿಗಳ ಕಛೇರಿಯಿಂದ ಹಿಡಿದು ಗ್ರಾಮ ಪಂಚಾಯತಿ ಕಛೇರಿಗಳ ವರೆಗೆ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ವಿಡಿಯೊ ನೋಡಿ: ನಾವು ಪ್ರಜಾಪ್ರಭುತ್ವ ರಾಷ್ಟ್ರ ಎಂದು ಎದೆ ತಟ್ಟಿಕೊಳ್ಳಬಹುದೆ? ಡಾ. ರಹಮತ್ ತರೀಕೆರೆ ವಿಶ್ಲೇಷಣೆಯಲ್ಲಿ

Donate Janashakthi Media

Leave a Reply

Your email address will not be published. Required fields are marked *