ಹಿಜಾಬ್ ಮೇನ್ಮನವಿ ಅರ್ಜಿ: ಮುಂದಿನ ವಾರ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಆರಂಭ

ನವದೆಹಲಿ: ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿನೀಯರಿಗೆ ತರಗತಿಯಲ್ಲಿ ಹಿಜಾಬ್ ನಿಷೇಧಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲಾಗುವುದೆಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ.

ಕರ್ನಾಟಕದ ಹಿಜಾಬ್ ನಿಷೇಧ ವಿವಾದ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಕೀಲ ಪ್ರಶಾಂತ್ ಭೂಷಣ್​ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಗಮನಿಸಿತು. ಈ ಪ್ರಕರಣಗಳನ್ನು ಬಹಳ ಹಿಂದೆಯೇ ಸಲ್ಲಿಸಲಾಗಿದ್ದರೂ ಇನ್ನೂ ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ.

ಹಿಜಾಬ್‌ ವಿಚಾರವಾಗಿ 2022ರ ಮಾರ್ಚ್‍ ತಿಂಗಳಿನಲ್ಲಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ತುರ್ತು ವಿಚಾರಣೆಗೆ 3-4 ಬಾರಿ ಮನವಿಯೂ ಮಾಡಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ ವಿಚಾರಣೆಗೆ ನಿರಾಕರಿಸಿತ್ತು. ಬೇಸಿಗೆ ರಜೆ ಹಿನ್ನೆಲೆ ಅರ್ಜಿ ವಿಚಾರಣೆ ಮತ್ತಷ್ಟು ವಿಳಂಬವಾಗಿತ್ತು.

ಈ ಮೇಲ್ಮನವಿ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠದಲ್ಲಿ ಪ್ರಸ್ತಾಪವಾಗಿದೆ. ಸೂಕ್ತ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಹೇಳಿದ್ದಾರೆ.

ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಕೊಠಡಿಗಳ ಒಳಗೆ ಹಿಜಾಬ್ ಅಥವಾ ತಲೆಗವುಸು ಧರಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಈ ವಿಷಯದ ಬಗ್ಗೆ ಪ್ರತಿಭಟನೆಗಳು ಮತ್ತು ಪ್ರತಿಭಟನೆಗಳ ನಂತರ, ಕೆಲವು ಕಾಲೇಜುಗಳಲ್ಲಿ ಹಿಜಾಬ್  ನಿಷೇಧಿಸಲಾಗಿತ್ತು. ಹಿಜಾಬ್ ಧರಿಸಿ ಹಾಜರಾದ ಅನೇಕ ವಿದ್ಯಾರ್ಥಿಗಳಿಗೆ ತರಗತಿಯೊಳಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು. ಇದರಿಂದ ಅನೇಕ ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದನ್ನೇ ನಿಲ್ಲಿಸಿದ್ದರು. ಇನ್ನು ಕೆಲವರು ವರ್ಗಾವಣೆ ಪ್ರಮಾಣಪತ್ರವನ್ನು ಕೋರಿದ್ದರು.

Donate Janashakthi Media

Leave a Reply

Your email address will not be published. Required fields are marked *