ಕೆಎಎಸ್ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ; ಕೆಜಿಗಟ್ಟಲೆ ಚಿನ್ನಾಭರಣ, 10 ಲಕ್ಷ ರೂ. ಪತ್ತೆ

Please follow and like us:
  • ಡಾ. ಸುಧಾ ವಿರುದ್ಧ ಲೋಕಾಯುಕ್ತದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರು

ಬೆಂಗಳೂರು: ಭ್ರಷ್ಟಾಚಾರದ ಆರೋಪದಲ್ಲಿ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ, ಕಚೇರಿಗಳ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು, ಉಡುಪಿಯ ಹೆಬ್ರಿ, ಮೈಸೂರಿನಲ್ಲಿರುವ ಡಾ. ಸುಧಾ ಅವರ ಮನೆ ಮತ್ತು ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಅವರ ಭವ್ಯ ಬಂಗಲೆಯಲ್ಲಿ ಎಸಿಬಿ ಪರಿಶೀಲನೆ ಮುಂದುವರೆದಿದ್ದು, ಈ ವೇಳೆ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನಾಭರಣ, ಸುಮಾರು ಹತ್ತು ಲಕ್ಷ ನಗದು, ಹಲವು ಆಸ್ತಿ ಪತ್ರಗಳು ಪತ್ತೆಯಾಗಿವೆ.

ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರದ ಕುರಿತಾಗಿ ದೂರು ದಾಖಲಾಗಿತ್ತು. ಪ್ರಸ್ತುತ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ಆಡಳಿತ ಅಧಿಕಾರಿ ಆಗಿರುವ ಕೆಎಎಸ್​ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿ ಒಂದು ಫ್ಲ್ಯಾಟ್​, ಬ್ಯಾಟರಾಯನಪುರ ಹಾಗೂ ಬಿಇಎಂಎಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಜೊತೆಗೆ, ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿರುವ ಮನೆ ಮೇಲೂ ಎಸಿಬಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

 ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ಮತ್ತು ತಂಡದಿಂದ ಡಾ. ಸುಧಾ ಅವರ ಮನೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಂದೆ ಸೊರಬದಲ್ಲಿ ತಹಸೀಲ್ದಾರ್ ಆಗಿದ್ದ ಡಾ. ಸುಧಾ‌ ಶಿವಮೊಗ್ಗದಲ್ಲೇ ಬೇರೆ ಬೇರೆ ತಾಲೂಕಿನಲ್ಲಿ ತಹಸೀಲ್ದಾರ್ ಆಗಿ ಹೆಚ್ಚು ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಿಡಿಎಯಲ್ಲಿ ಮೊದಲು ಡೆಪ್ಯೂಟಿ ಸೆಕ್ರೆಟರಿ ಆಗಿದ್ದು, ನಂತರ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಸದ್ಯ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿರುವ ಡಾ. ಸುಧಾ ಅಲ್ಲಿ ಅಧಿಕಾರ ವಹಿಸಿಕೊಂಡು ದಿನದಿಂದ ಇದುವರೆಗೂ ಕಚೇರಿಗೆ ಹೋಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ, ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಇಂದು ಎಸಿಬಿ ದಾಳಿ ನಡೆಸಲಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *