ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಶನಿವಾರ ಮೃತಪಟ್ಟಿದ್ದಾರೆ. ಧ್ರುವ ನಾರಾಯಣ್ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧೃವ ನಾರಾಯಣ್ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧ್ರುವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು.