ವರದಿ : ಮಹಾಲಿಂಗ ಜಾಲಹಳ್ಳಿ
ರಾಯಚೂರು: ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸುವುದು, ಮುಂಗಾರು ಜೋಳದ ಬಾಕಿ ಹಣ ಬಿಡುಗಡೆ ಮಾಡುವುದು ಹಾಗೂ ನಿವೇಶನ ರಹಿತ ಬಡ ಕುಟುಂಬಗಳಿಗೆ ಹಕ್ಕುಪತ್ರ ಮತ್ತು ಮನೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾ ಸಮಿತಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ಸತ್ಯಾಗ್ರಹ ನಡೆಸಿತು. ರಾಯಚೂರು
ಪ್ರತಿಭಟನಾಕಾರರು ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬೀಜ ಮತ್ತು ರಸಗೊಬ್ಬರಗಳು ಲಭ್ಯವಾಗುತ್ತಿಲ್ಲ. ಕೆಲವು ಕಡೆಗಳಲ್ಲಿ ಕೃತಕ ಅಭಾವ ಸೃಷ್ಟಿಸಿ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ರೈತರಿಗೆ ಎಂಆರ್‌ಪಿ ದರದಲ್ಲಿ ಅಗತ್ಯ ಕೃಷಿ ಪರಿಕರಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಿರುವ ಮುಂಗಾರು ಜೋಳದ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ವಿದ್ಯುತ್ ವಿತರಣೆಯನ್ನು ಈ ಹಿಂದಿನಂತೆ ಜೆಸ್ಕಾಂ ಮೂಲಕವೇ ಮುಂದುವರಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ | ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ – ಸಿದ್ದರಾಮಯ್ಯ

ದೇವದುರ್ಗ, ಸಿಂಧನೂರು, ಮಸ್ಕಿ ಹಾಗೂ ಲಿಂಗಸೂಗೂರು ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ನಿವೇಶನ ರಹಿತ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಬೇಕು. ಆಶ್ರಯ ಯೋಜನೆಯಡಿ ನಿವೇಶನ ಮಂಜೂರು ಮಾಡುವುದರ ಜೊತೆಗೆ ಕುಡಿಯುವ ನೀರು, ರಸ್ತೆ, ಚರಂಡಿ ಮತ್ತು ಬೀದಿ ದೀಪ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ರಾಯಚೂರು
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಕಾರ್ಮಿಕರಿಗೆ ದೂರದ ಪ್ರದೇಶಗಳಲ್ಲಿ ಕೆಲಸ ನೀಡುವುದನ್ನು ನಿಲ್ಲಿಸಿ ಪೂರ್ಣ ಪ್ರಮಾಣದ ಕೂಲಿ ಪಾವತಿಸಬೇಕು. ಬಿಸಿಲಿನ ತಾಪದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಧರಣಿಯಲ್ಲಿ ಪ್ರಾಂತ ರೈತ ಸಂಘಧ ಜಿಲ್ಲಾ ಸಮಿತಿ ಅಧ್ಯಕ್ಷ ಬಸವಂತ್ರಾಯಗೌಡ, ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ, ಪ್ರಾಂತ ಕೂಲಿಕಾರರ ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಪ್ಪ ಹೊಸ್ಕೇರಾ, ಮುಖಂಡರಾದ ಕೆ. ಜಿ. ವಿರೇಶ್, ಶಬ್ಬೀರ್ ಜಾಲಹಳ್ಳಿ, ಶರಣಬಸವ, ಶಕುಂತಲಾ ದೇಸಾಯಿ, ಸೇರಿದಂತೆ ಅನೇಕರು ಭಾಗವಹಿಸಿದ್ದರು. ಬೇಡಿಕೆಗಳನ್ನು ಶೀಘ್ರ ಈಡೇರಿಸದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.
ಇದನ್ನೂ ನೋಡಿ : ಪಿಟಿಸಿಎಲ್ ಕಾಯ್ದೆ ಜಾರಿಯಲ್ಲಿ ವೈಫಲ್ಯ? ದಲಿತ ಭೂಹಕ್ಕುಗಳ ಬಗ್ಗೆ ಹೆಚ್ಚಿದ ಆತಂಕ | ಜಸ್ಟೀಸ್ ವಿ.ಗೋಪಾಲಗೌಡ
