ನವದೆಹಲಿ: ಒಂದೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇದೀಗ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎಂಬಂತೆ ತೈಲ ಕಂಪನಿಗಳು ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯನ್ನು 25.50 ರೂಪಾಯಿ ಹೆಚ್ಚಿಸಿದೆ. ಇದರ ಪರಿಣಾಮ ಪರಿಷ್ಕೃತ ದರದಂತೆ ದೆಹಲಿಯಲ್ಲಿ ಒಂದು ಅಡುಗೆ ಅನಿಲ ಸಿಲಿಂಡರ್ ಬೆಲೆ 834.50 (809) ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಗಳ ಬೆಲೆ ಪರಿಷ್ಕರಣೆ ಅಗತ್ಯ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ಈ ಮೊದಲು ಮೇ 1ರಂದು ಗ್ಯಾಸ್ ಕಂಪನಿಗಳು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಎಲ್ ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 10 ರೂಪಾಯಿ ಇಳಿಕೆ ಮಾಡಿದ್ದ ನಂತರ ಏಪ್ರಿಲ್ ನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲಾಗಿತ್ತು.
ಇದಕ್ಕೂ ಮೊದಲು ಫೆಬ್ರುವರಿ ಮತ್ತು ಮಾರ್ಚ್ ನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು.
ದೇಶದ ಮಹಾನಗರಗಳಲ್ಲಿ ಎಲ್ ಪಿಜಿ ಸಿಲಿಂಡರ್ ದರ ಹೀಗಿದೆ: ಮುಂಬಯಿಯಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 809 ರೂಪಾಯಿ ಇದ್ದಿದ್ದು, ಈಗ 834.50 ರೂಪಾಯಿಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 812 ರೂಪಾಯಿ ಇದ್ದಿದ್ದು, ಈಗ 836.50 ರೂಪಾಯಿಗೆ ಹೆಚ್ಚಳವಾಗಿದೆ. ಕೋಲ್ಕತಾದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 835.50 ರೂ. ಇದ್ದಿದ್ದು, ಈಗ 861 ರೂಪಾಯಿಗೆ ಏರಿಕೆಯಾಗಿದೆ.