ನಾಳೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟ

– ಘಟನೆಯ 27 ವರ್ಷಗಳ ಬಳಿಕ ಮೊದಲ ತೀರ್ಪು
– ಬಾಬರಿ ಮಸೀದಿ ಧ್ವಂಸ ತಪ್ಪು ಎಂದಿರುವ ಸುಪ್ರೀಂಕೋರ್ಟ್

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ನಾಳೆ (ಸೆಪ್ಟೆಂಬರ್ 30ರಂದು) ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಸಿಬಿಐ ವಿಶೇಷ ಕೋರ್ಟ್​ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠವು ಘಟನೆ ನಡೆದ 27 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ.

ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿರುವಂತೆ ನಿರ್ದೇಶಿಸಲಾಗಿದೆ. ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಸೇರಿದಂತೆ 32 ಆರೋಪಿಗಳು ಕೋರ್ಟ್​ಗೆ ಹಾಜರಾಗಲಿದ್ದಾರೆ.
ಸೆಪ್ಟೆಂಬರ್ 1ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗೂ ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಇವೆಲ್ಲವೂ 1992ರ ಡಿಸೆಂಬರ್ 6ರಂದು ಕರಸೇವಕರು ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು ಎಂಬ ಬಗೆಗಿನ ಸಾಕ್ಷ್ಯಾಧಾರಗಳಾಗಿವೆ.

ರಾಮಜನ್ಮಭೂಮಿ ಪ್ರಕರಣದ ತೀರ್ಪಿನ ವೇಳೆ ಬಾಬರಿ ಧ್ವಂಸಗೊಳಿಸಿದ್ದು ತಪ್ಪು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿರುವ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯದ ತೀರ್ಪು ಕುತೂಹಲ ಮೂಡಿಸಿದೆ.

ಪ್ರಕರಣದ ಹಿನ್ನೆಲೆ

‌ಮೊಘಲರ ಕಾಲದಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕಟ್ಟಲಾಗಿತ್ತು. ಕಾಲಾನಂತರ ಅಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿಯನ್ನು ನಿರ್ಮಾಣ ಮಾಡಲಾಗಿದೆ ಎಂದು ಹಿಂದುಗಳು ಆರೋಪಿಸಿದ್ದರು. 1984ರಲ್ಲಿ ವಿಶ್ವ ಹಿಂದು ಪರಿಷತ್ ಈ ವಿಚಾರದಲ್ಲಿ ಆಂದೋಲನ ಶುರುಮಾಡಿತು. ಇದಾದ ಬಳಿಕ ವ್ಯಾಜ್ಯ ನಾಯಾಲಯದ ಮೆಟ್ಟಿಲೇರಿತು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ‘ಕರಸೇವಕರೆಂಬ’ ಹಿಂದು ಕಾರ್ಯಕರ್ತರು ಬಾಬ್ರಿ ಮಸೀದಿಯನ್ನು ಕೆಡವಿದರು .

ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಮತ್ತಿತರ 32 ಮಂದಿ ಸೇರಿಕೊಂಡು ಸಂಚುರೂಪಿಸಿ ಭೂವಿವಾದ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿಯನ್ನು ಕೆಡವಿದ್ದಾರೆ ಎಂದು ದೂರು ದಾಖಲಿಸಲಾಯಿತು.

ಸೆಷನ್ ಕೋರ್ಟಿನಿಂದ ಸಿಬಿಐ ವಿಶೇಷ ನ್ಯಾಯಾಲಯದವರೆಗೆ ವಿಚಾರಣೆ ನಡೆದಿದೆ. ಇದೀಗ ಸಿಬಿಐ ವಿಶೇಷ ನ್ಯಾಯಲಯ ಅಂತಿಮ ತೀರ್ಪು ಪ್ರಕಟಿಸುತ್ತಿದೆ. ತೀರ್ಪು ಪ್ರಕಟದ ಹಿನ್ನೆಲೆಯಲ್ಲಿ ‌ಅಯೋಧ್ಯೆಯೂ ಸೇರಿದಂತೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ 144 ಸೆಕ್ಷನ್​​ ಜಾರಿಗೊಳಿಸಲಾಗಿದೆ. ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸುವ ತೀರ್ಪು ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಮತ್ತಿತರರಿಗೆ ಅತ್ಯಂತ ಮಹತ್ವದ್ದಾಗಿದೆ. ದೋಷಿ ಅಂತಾ ಸಾಬೀತಾದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

Donate Janashakthi Media

Leave a Reply

Your email address will not be published. Required fields are marked *