ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ಕರ್ನಾಟಕ ರಾಜ್ಯವು ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಕರ್ನಾಟಕ
ಶುಕ್ರವಾರ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಚ್ಐವಿ ಮಾರಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ. 1981ರಲ್ಲಿ ಮೊದಲು ಇದು ಕಾಣಿಸಿಕೊಂಡಿತ್ತು. 1986ರಲ್ಲಿ ಭಾರತದಲ್ಲಿ, 1996ರಲ್ಲಿ ರಾಜ್ಯದಲ್ಲಿ ಕಾಣಿಸಿಕೊಂಡಿತು. ಇತ್ತೀಚಿನ ದಿನಗಳಲ್ಲಿ ಎಚ್ಐವಿಪೀಡಿತರ ಸಂಖ್ಯೆ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು.
2015-2020ರವರೆಗೆ ಏಡ್ಸ್ ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ ಆರೋಗ್ಯ ಇಲಾಖೆಯ ಹೊಣೆಯಾಗಿರದೇ, ಇಡೀ ಸಮಾಜದ ಹೊಣೆಯಾಗಿದೆ. ಮುಂದಿನ ಐದು ವರ್ಷಗಳಲ್ಲಿ ಭಾರತದ ದೇಶ, ಕರ್ನಾಟಕ ಏಡ್ಸ್ ಮುಕ್ತ ದೇಶ / ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು.
ರೋಗಕ್ಕೆ ತುತ್ತಾಗಿ ಅನುಭವಿಸುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾಮೂಹಿಕವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ, ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದರು.
ಇದನ್ನೂ ಓದಿ: ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಮುಖ್ಯ ಪುಸ್ತಕ ಬರಹಗಾರರ ಪ್ರತಿಭಟನೆ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ ದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಡ್ಸ್‌ಪೀಡಿತರೊಂದಿಗೆ ಮಾತುಕತೆ ನಡೆಸಿದರು. ಎಚ್‌ಐವಿ ಸೋಂಕಿತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಏಡ್ಸ್ ನಿರ್ಮೂಲನೆಯಲ್ಲಿ ಶ್ರಮಿಸಿದ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಅಜಯ್‌ಸಿಂಗ್, ನಟ ಪ್ರೇಮ್, ನಟಿ ಸಂಜನಾ ಗಲ್ರಾನಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಡಿಯೋ ನೋಡಿ: ಮೋದಿ ಸರಕಾರದ ಅವಧಿಯಲ್ಲಿ 4 ಲಕ್ಷಕ್ಕೂ ಅಧಿಕ ರೈತರು ಮೃತ್ಯು: ವಿಜೂ ಕೃಷ್ಣನ್ ಆರೋಪJanashakthi Media