ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದು ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿ ನಿಖರವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಿದೆ ಎಂದು ಅಧಿಕೃತ ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯೂ ಹೈದರಾಬಾದ್ ಮೂಲದ ಮದ್ಯ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಧ್ಯಾಹ್ನದ ವೇಳೆಗೆ ತಿಹಾರ್ ಜೈಲಿಗೆ ತಲುಪಲಿದ್ದು, ಅಕ್ರಮ ಹಣ ತಡೆಗಟ್ಟುವಿಕೆ ಕಾಯಿದೆಯ ಅಡಿಯಲ್ಲಿ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆಯನ್ನು ಪಡೆಯಲಾಗುತ್ತದೆ. ಸಿಸೋಡಿಯಾ ಅವರನ್ನು ಸಿಬಿಐ ಫೆಬ್ರುವರಿ 26ರಂದು ಬಂಧಿಸಿದ್ದು, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ : ಮಾರ್ಚ್ 20ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
ಅಕ್ರಮ ಹಣ ತಡೆಗಟ್ಟುವಿಕೆ ಕಾಯಿದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಸುದೀರ್ಘ ವಿಚಾರಣೆಗೆ ಒಳಪಡಿಸಿದ ನಂತರ ಪಿಳ್ಳೈ ಅವರನ್ನು ಸೋಮವಾರ ಇಡಿ ಬಂಧಿಸಿತ್ತು. ಉದ್ಯಮಿ ಪಿಳ್ಳೈ ‘ಸೌತ್ ಗ್ರೂಪ್‘ ನ ಮದ್ಯದ ವ್ಯಾಪಾರಿಗಳನ್ನು ಪ್ರತಿನಿಧಿಸುತ್ತಾರೆ ಎಂದು ಆರೋಪಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿಸಿಲಾದ 11ನೇ ವ್ಯಕ್ತಿಯಾಗಿದ್ದಾರೆ. ಪಿಳ್ಳೈ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಮೊದಲು ಸ್ಥಳೀಯ ನ್ಯಾಯಾಲಕ್ಕೆ ಹಾಜರುಪಡಿಸಲಿದೆ.