ಮಾರ್ಚ್‌ 9ರಂದು ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ಕರ್ನಾಟಕ ಬಂದ್​ ರದ್ದು

ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್‌ ಗೆ ಕರೆ ನೀಡಿದ್ದ ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು, ಕರ್ನಾಟಕ ಬಂದ್‌ ರದ್ದುಪಡಿಸಿದೆ. ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದೆ.

ಪ್ರದೇಶ ಕಾಂಗ್ರೆಸ್‌ ಪಕ್ಷದ ವತಿಯಿಂದ ಮಾರ್ಚ್‌ 09ರ ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಕರ್ನಾಟಕ ಬಂದ್‌ ನಡೆಸಲು ನಿರ್ಧರಿಸಿತು. ಬೆಂಗಳೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಾಳೆ ನಡೆಯಲಿರುವ ಬಂದ್ ರದ್ದು ಮಾಡಲು ನಿರ್ಧರಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಮನವಿ ಮೇರೆಗೆ ಕಾಂಗ್ರೆಸ್ ಘೋಷಿಸಿದ್ದ ಬಂದ್​ ರದ್ದುಗೊಂಡಿದೆ. ಶಿಕ್ಷಣ ಸಂಸ್ಥೆಗಳ ಮನವಿಗೆ ಬೆಲೆ ಕೊಟ್ಟು ಈ ನಿರ್ಧಾರ ಕೈಗೊಂಡಿದ್ದೇವೆ” ಎಂದರು.

ಇದನ್ನು ಓದಿ: ಮಾರ್ಚ್‌9 ರ ಕೈ ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ : ರಣದೀಪ್‍ಸಿಂಗ್ ಸುರ್ಜೇವಾಲ

ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಾಹನಗಳಿಗೆ ಅಡ್ಡಿಪಡಿಸದೇ, ಅಂಗಡಿ ಮುಂಗಟ್ಟು ಮಾತ್ರ ಮುಚ್ಚಿ ಬಂದ್ ನಡೆಸಲು ಈ ಮುನ್ನ ತೀರ್ಮಾನಿಸಲಾಗಿತ್ತು. ಆದರೆ, ಪರೀಕ್ಷೆ ಬರೆಯುವವರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಬಂದ್ ಕರೆಯನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಸಿಲುಕಿದ ಬೆನ್ನಲ್ಲೇ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಎರಡು ಗಂಟೆಗಳ ಕಾಲ ಸಾಂಕೇತಿಕ ಕರ್ನಾಟಕ ಬಂದ್​ ಗೆ ಕರೆ ನೀಡಿತು. ಇದೀಗ ಕಾಂಗ್ರೆಸ್​ ಬಂದ್​ ರದ್ದುಗೊಳಿಸಿದೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ರಾಜ್ಯ ಬಂದ್​  ಹಿಂಪಡೆದುಕೊಳ್ಳಲು ತೀರ್ಮಾನಿಸಿದ್ದಾರೆ.

ಡಿಕೆಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಸಾದ್ ಸೇರಿದಂತೆ ಇನ್ನಿತರ ನಾಯಕರು ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನು ಓದಿ: ಮಾಡಾಳ್‌ಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ವಕೀಲರ ಸಂಘ

ವಿರೂಪಾಕ್ಷಪ್ಪ ಜಾಮೀನು ವಿಚಾರದಲ್ಲಿ ಸರ್ಕಾರ ಶಾಮೀಲು

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ. ನ್ಯಾಯಾಂಗದ ಪ್ರಕ್ರಿಯೆ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಸರ್ಕಾರದ ಬೆಂಬಲ ಇಲ್ಲದೆ ಒಂದೇ ದಿನದಲ್ಲಿ ಜಾಮೀನು ಸಿಗುವುದಿಲ್ಲ. ಪ್ರತಿಪಕ್ಷದವರಿಗೆ ಈ ರೀತಿ ಬೇಲ್ ಸಿಗಲ್ಲ. ಮಾಡಾಳ್​ಗೆ ಜಾಮೀನು ಸಿಗುವ ವಿಚಾರವಾಗಿ ಸರ್ಕಾರ ಶಾಮೀಲಾಗಿದೆ ಎಂದು ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *