ಬೆಂಗಳೂರು : ಡಿಸೆಂಬರ್ 30, 2020 ರಂದು ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆಯ ನಿಮಿತ್ಯ ಡಿಸೆಂಬರ್ 29ರ ಮಧ್ಯರಾತ್ರಿಯಿಂದ ಡಿಸೆಂಬರ್ 30ರ ಮಧ್ಯರಾತ್ರಿಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.
ಬೆಂಗೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆಯು ಶಾಂತಿಯುತ ಮತ್ತು ಮುಕ್ತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಗಳು, 1967 ರ ನಿಯಮ-10(ಬಿ)ರನ್ವಯ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ಅಧಿನಿಯಮದಂತೆ ಆದೇಶ ಜಾರಿಗೊಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಚಿಲ್ಲರೆ ಮದ್ಯದ ಅಂಗಡಿಗಳು, ಬಾರ್ ಅಂಡ್ ರೆಸ್ಟೋರೆಂಟ್ ಗಳು, ಸಗಟು ಮದ್ಯದ ಅಂಗಡಿಗಳು, ಕ್ಲಬ್ ಗಳು, ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಗಳು, ಪಬ್ ಗಳು, ವೈನ್ ಟ್ಯಾವರಿನ್ ಗಳು, ವೈನ್ ಬೋಟಿಕ್ ಗಳು ಇತ್ಯಾದಿಗಳನ್ನು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.