ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಇಂದು(ಮೇ 17) ಅಂಕಿತ ಹಾಕಿದ್ದಾರೆ.
2021ರ ಡಿಸೆಂಬರ್ ತಿಂಗಳಿನಲ್ಲಿ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಆದರೆ, ವಿಧಾನ ಪರಿಷತ್‌ನಲ್ಲಿ ಈ ಮಸೂದೆ ಮಂಡಿಸಲು ಸಾಧ್ಯವಾಗಿರಲಿಲ್ಲ. ವಿಧಾನಸಭೆಯ ಅಂಗೀಕಾರ ಪಡೆದಿರುವ ಸ್ವರೂಪದಲ್ಲೇ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಮೇ 12ರಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.
ಇದನ್ನು ಓದಿ: ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಸಚಿವ ಆರಗ ಜ್ಞಾನೇಂದ್ರ ; ಪ್ರತಿ ಹರಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್
ಸಂಪುಟ ಸಭೆಯ ತೀರ್ಮಾನದಂತೆ ಸಂಸದೀಯ ವ್ಯವಹಾರಗಳು ಮತ್ತು ಕಾನೂನು ಇಲಾಖೆಯು ರವಾನಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇಂದಿನಿಂದಲೇ ಸುಗ್ರೀವಾಜ್ಞೆ ಜಾರಿಗೆ ಬಂದಿದೆ. ಮತಾಂತರಕ್ಕೆ ಪ್ರಚೋದನೆ ನೀಡುವವರಿಗೆ ವಿವಿಧ ಹಂತಗಳಲ್ಲಿ ಹತ್ತು ವರ್ಷಗಳವರೆಗೂ ಜೈಲು ಶಿಕ್ಷೆ ವಿಧಿಸುವುದಕ್ಕೆ ಸುಗ್ರೀವಾಜ್ಞೆ ಅವಕಾಶ ಕಲ್ಪಿಸಲಿದೆ.