ಮತ್ತೆ ಕಾಡುತ್ತಿದೆ ಕೊರೊನಾ ಭೀತಿ: ಬೆಂಗಳೂರಿನ ಶಾಲೆಯೊಂದರಲ್ಲಿ 37 ಜನರಿಗೆ ಸೋಂಕು

ಬೆಂಗಳೂರು: ಕಳೆದ ಕೆಲ ತಿಂಗಳುಗಳಿಂದ ಕೊರೊನಾ ಹರಡುವಿಕೆ ಕಡಿಮೆಗೊಳ್ಳುತ್ತಿದ್ದರೂ, ಕೆಲವು ಕಡೆಗಳಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಆತಂಕಕ್ಕೆ ಎಡೆ ಮಾಡಿದೆ.

ನಿನ್ನೆಯಷ್ಟೇ ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಸುದ್ದಿಯಾಗಿತ್ತು. ಈಗ ಬೆಂಗಳೂರಿನ ಮಹದೇವಪುರ ವಲಯದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ನಗರದ ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಸಂದ್ರದ ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು ತಗುಲಿದೆ. 13 ರಿಂದ 15 ವರ್ಷದ 33 ವಿದ್ಯಾರ್ಥಿಗಳು, ನಾಲ್ವರು ಶಾಲಾ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ.

‘ದಿ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು’ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿದೆ. ಅಲ್ಲಿ ಈವರೆಗೆ ವಿದ್ಯಾರ್ಥಿಗಳು ಸೇರಿದಂತೆ 497 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಶಿಕ್ಷಣ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಕೋವಿಡ್ ಲಸಿಕೆ ಪಡೆದಿದ್ದಾರೆ. ಸೋಂಕಿತರು ಲಕ್ಷಣ ರಹಿತರಾಗಿದ್ದಾರೆ. ಹೀಗಾಗಿ, ಆಸ್ಪತ್ರೆಗೆ ದಾಖಲಿಸಲಿಲ್ಲ. ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಶಿಕ್ಷಣ ಸಂಸ್ಥೆಯನ್ನು ಸೀಲ್‌ಡೌನ್ ಮಾಡಲಾಗಿದೆ.

8ನೇ ತರಗತಿಯ ಒಬ್ಬ ವಿದ್ಯಾರ್ಥಿ, 9ನೇ ತರಗತಿಯ 12 ವಿದ್ಯಾರ್ಥಿಗಳು, 10ನೇ ತರಗತಿಯ 8 ವಿದ್ಯಾರ್ಥಿಗಳು, 11ನೇ ತರಗತಿಯ 3 ವಿದ್ಯಾರ್ಥಿಗಳು ಹಾಗೂ 12 ತರಗತಿಯ 9 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ.

32 ವಿದ್ಯಾರ್ಥಿಗಳಿಗೆ ಸಂಸ್ಥೆಯ ವೈದ್ಯಕೀಯ ಕೇಂದ್ರದಲ್ಲಿಯೇ ಆರೈಕೆ ಮಾಡಲಾಗುತ್ತಿದೆ. ಮಹದೇವಪುರ ವಲಯದಲ್ಲಿ ವಾಸವಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಕೋವಿಡ್ ಪೀಡಿತರಾಗಿರುವುದು ದೃಢಪಡುತ್ತಿದ್ದಂತೆ ಎಲ್ಲ ನೇರ ಹಾಗೂ ಪರೋಕ್ಷ ಸಂಪರ್ಕಿತರನ್ನು ಪರೀಕ್ಷೆ ಮಾಡಲಾಗಿದೆ.

24 ಗಂಟೆಯಲ್ಲಿ 10,549 ಜನರಿಗೆ ಸೋಂಕು

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,549 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ, 488 ಜನರು ಬಲಿಯಾಗಿದ್ದಾರೆ. ಸದ್ಯ ಭಾರತದಲ್ಲಿ 1,10,133 ಸಕ್ರಿಯ ಪ್ರಕರಣಗಳು ಜಾಲ್ತಿಯಲ್ಲಿವೆ.

ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 306 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,94,561ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 2 ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,187 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 224 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,49,853ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,492ಕ್ಕೆ ಇಳಿದಿದೆ.

Donate Janashakthi Media

Leave a Reply

Your email address will not be published. Required fields are marked *