ಮೇಕೆದಾಟು ಯೋಜನೆ ಬಗ್ಗೆ ಬಿಜೆಪಿಯಲ್ಲಿ ದ್ವಂದ್ವನೀತಿ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟನೇ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಪಕ್ಷದ್ದು ಎರಡು ರೀತಿಯ ಅಭಿಪ್ರಾಯವಾಗಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದ್ದರೆ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ತಮಿಳುನಾಡಿನ ಪರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಯಾಕೆ ಈ ರೀತಿಯ ದಂದ್ವನೀತಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯರ ಅವರು ʻʻಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ. ಆದರೆ ತಮ್ಮ ಸಡಿಲ ನಾಲಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಲಿದೆ. ಇದರಿಂದ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದುʼʼ ಎಂದು ಎಚ್ಚರಿಸಿದ್ದಾರೆ.

ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಪ್ರಾಯ ಹೊಂದಿದ್ದರೆ ಅದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ ಎಂದಿದ್ದಾರೆ.

ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೆ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು.

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿ ಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ವಿಚಾರದಲ್ಲಿಯೂ ಕೇಂದ್ರ ಸರ್ಕಾರದ ತಳೆದ ದಂದ್ವ ನಿಲುವು ರಾಜ್ಯದ ಹಿತಾಸಕ್ತಿಗೆ ಮಾರಕವಾಯಿತು.

ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ನದಿನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೆ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ.

ಕೆಆರ್ ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ  ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್  ಒಬ್ಬ ಪ್ರಬುದ್ಧಇ ರಾಜಕಾರಣಿ. ಅವರು  ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು. ನೆರೆರಾಜ್ಯಗಳ ಜೊತೆ ಸೌಹಾರ್ದಯುತ ಸಂಬಂಧವನ್ನು ಉಳಿಸಿ-ಬೆಳೆಸಿಕೊಂಡು ಹೋಗಬೇಕು.

ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ .ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು  ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ.ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ ಎಂದು ಟೀಕಿಸಿದ್ದಾರೆ.

ತಮಿಳುನಾಡು ಸರ್ಕಾರ ಕೂಡಾ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಬೆಳೆಯಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟ ಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *