ಮೇಕೆದಾಟು ಯೋಜನೆ ಭೂಮಿಪೂಜೆ ಏರ್ಪಡಿಸಿ-ಸರಕಾರದ ಜತೆ ನಾವಿದ್ದೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ನೂರು ವರ್ಷ ಕಳೆದರೂ ತಮಿಳುನಾಡು ಮೇಕೆದಾಟು ಯೋಜನೆಗೆ ತಗಾದೆ ಎತ್ತುತ್ತಲೇ ಇರುತ್ತದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರ ಇರುವುದೆಂದು ಬಡಾಯಿ ಕೊಚ್ಚಿಕೊಳ್ಳುವ ರಾಜ್ಯದ ಬಿಜೆಪಿ ಸರಕಾರವು ಕೇಂದ್ರದಲ್ಲಿ ತಮ್ಮ ಅಧಿಕಾರ ಬಳಸಿ ಮೇಕೆದಾಟು ಯೋಜನೆ ಕಾರ್ಯಾರಂಭದ ಅಗತ್ಯ ಅನುಮತಿ ಪಡೆದು ನಾಳೆಯೇ ಭೂಮಿ ಪೂಜೆ ಮಾಡಿ, ಏನೇ ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಸರಕಾರದ ಜತೆಗೆ ನಾವೆಲ್ಲರೂ ನಿಲ್ಲುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಸಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ತೊರೆದ ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು.

ಮುಂದುವರೆದು ಮಾತನಾಡಿದ ಡಿ.ಕೆ. ಶಿವಕುಮಾರ್‌ ಅವರು ‘ಮೇಕೆದಾಟು ಯೋಜನೆಗೆ ಅಡ್ಡಿ ಮಾಡುವುದು ತಮಿಳುನಾಡಿನ ಎಲ್ಲ ಪಕ್ಷಗಳ ಅಜೆಂಡಾ. ಅವರ ರಾಜಕೀಯ ಅಜೆಂಡಾವಂತೂ ನಿರಂತರವಾಗಿ ಇರುತ್ತದೆ. ಮೇಕೆದಾಟು ಯೋಜನೆ ಮಾಡಲು ಯಡಿಯೂರಪ್ಪನವರಿಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಈಗ  ಕೇಂದ್ರ ಪರಿಸರ ಮಂಡಳಿಯಿಂದ ಅನುಮತಿ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಯೋಜನೆ ಕಾರ್ಯಾರಂಭಕ್ಕೆ ಚಾಲನೆ ನೀಡಿʼʼ ಎಂದು ಹೇಳಿದರು.

ಇದನ್ನು ಓದಿ: ಮತ್ತೊಬ್ಬರ ಜಗಳದಲ್ಲಿ ನಾವೇಕೆ ಮದ್ಯಪ್ರವೇಶಿಸಬೇಕು-ಮೇಕೆದಾಟು ಯೋಜನೆ ಪೂರ್ಣಗೊಳ್ಳಲ್ಲಿ: ಡಿ.ಕೆ. ಶಿವಕುಮಾರ್

ಮೇಕೆದಾಟು ಯೋಜನೆ ನನ್ನ ಕ್ಷೇತ್ರದಲ್ಲೇ ಬರಲಿದ್ದು, ಇದು ಕೇವಲ ಬೆಂಗಳೂರಿನ ಜನರಿಗೆ ಕುಡಿಯುವ ನೀರು ಪೂರೈಕೆಗೆ ಹಾಗೂ ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಕೆ ಆಗುತ್ತದೆ. ನನ್ನ ಕ್ಷೇತ್ರದ ಹತ್ತು ಎಕರೆಗೂ ಈ ನೀರು ಬಳಕೆಯಾಗುವುದಿಲ್ಲ. ಈ ಯೋಜನೆಗೆ ಸುಮಾರು 500 ರಿಂದ 1000 ಎಕರೆಯಷ್ಟು ರೆವಿನ್ಯೂ ಜಾಗ ಬೇಕಾಗಬಹುದು. ಯಾವ ಪ್ರದೇಶವೂ ಮುಳುಗಡೆಯಾಗುವ ಭೀತಿ ಇಲ್ಲ. ಹೀಗಾಗಿ ಇದು ಅತ್ಯಂತ ಅಗ್ಗದ ಹಾಗೂ ಉಪಯುಕ್ತ ಯೋಜನೆಯಾಗಿದೆ ಎಂದು ಹೇಳಿದರು.

ತಮಿಳುನಾಡಿನವರು ರಾಜ್ಯ ರಾಜಕಾರಣ ಮಾಡುವವರು. ಡಿಎಂಕೆ ಆಗಲಿ, ಅಣ್ಣಾಡಿಎಂಕೆ ಆಗಲಿ, ಅವರ ರಾಜಕೀಯ ಅಜೆಂಡಾ ಒಂದೇಯಾಗಿದೆ. ಆ ಬಗ್ಗೆ ನಮ್ಮ ತಕರಾರಿಲ್ಲ, ನಮ್ಮಲ್ಲಿ ಸರ್ವಪಕ್ಷ ನಿಯೋಗದ ಅಗತ್ಯವೇ ಇಲ್ಲ. ಮೇಕೆದಾಟು ವಿಚಾರದಲ್ಲಿ ನಾವು ಸರಕಾರದ  ಪರವಾಗಿದ್ದೇವೆ. ತಮಿಳುನಾಡಿನವರು ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಲಿ, ಏನಾದರೂ ಮಾಡಿಕೊಳ್ಳಲಿ. ಇದರಲ್ಲಿ ನಾವು ಒತ್ತಡ ಹೇರುವ ಅವಶ್ಯಕತೆ ಏನಿದೆ. ಯೋಜನೆ ಅನುಷ್ಠಾನಕ್ಕೆ ತರಬೇಕು ಅಷ್ಟೇ. ಎಂದರು.

Donate Janashakthi Media

Leave a Reply

Your email address will not be published. Required fields are marked *