ಮೇಕೆದಾಟು ಯೋಜನೆ ಜಾರಿಗಾಗಿ ಬೊಮ್ಮಾಯಿ ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಎಚ್‌ಡಿಕೆ ಆಗ್ರಹ

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರಕಾರದ ಮೇಲೆ ಹೆಚ್ಚಿನ ಒತ್ತಡ ಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ನೆನ್ನೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ರನ್ನು ಬೇಟಿ ಮಾಡಿದ ಕುಮಾರಸ್ವಾಮಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮತ್ತು ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳಿಗೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಲ್ನಡಿಗೆ ಜಾಥಾದ ಮೂಲಕ ರಾಜಭವನಕ್ಕೆ ತೆರಳಿದರು.

ಇದನ್ನು ಓದಿ: ಬೊಮ್ಮಾಯಿ ಜನತಾ ಪರಿವಾರದವರು-ಈಗಿರುವುದು ನಮ್ಮದೇ ಸರಕಾರ: ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ

ಈ ಸಂದರ್ಭದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ವಿಧಾನಸಭಾ ಸದಸ್ಯರು, ವಿಧಾನಪರಿಸತ್‌ ಸದಸ್ಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಇಂದು ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ‘ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್‌ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ?’ ಎಂದು ಪ್ರಶ್ನೆ ಮಾಡಿದ್ದಾರೆ.

‘ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ, ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ’ ಇದಕ್ಕೆ ಏನಂದು ಭಾವಿಸೋಣ ಎಂದು ಎಚ್‌ ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

‘ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕುತನವನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ‘ನಾವು ಯೋಜನೆ ಪರ ಇದ್ದೇವೆ’ ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು’ ಎಂದಿದ್ದಾರೆ.

ಇದನ್ನು ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ಜಲ್ ಜೀವನ್ ಮಿಷನ್ ಪೂರ್ಣಗೊಳಿಸಿ: ಸಚಿವ ಗಜೇಂದ್ರ ಸಿಂಗ್ ಶೇಖಾವತ್

‘ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು. ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು. ಈ ಕಾರ್ಯವನ್ನು ಜೆಡಿಎಸ್‌ ಯಾವಾಗಲೂ ಬೆಂಬಲಿಸುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ’ ಎಂದು ಎಚ್‌ಡಿಕೆ ಒತ್ತಾಯಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಜೆಡಿಎಸ್‌ ಪಕ್ಷವು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು, ಹೋರಾಟವು ಮತ್ತಷ್ಟು ತೀವ್ರವಾಗಲಿದೆ ಎಂದು ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *