ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್.ಎಸ್. ಸುತ್ತ, ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತದೆ ಎಂಬ ವಿಚಾರದ ಬಗ್ಗೆ ಎದ್ದಿರುವ ವಿವಾದ ಹಾಗೂ ಇದರಲ್ಲಿ ಪ್ರಭಾವಿ ರಾಜಕಾರಣಿಗಳ ಪಾತ್ರ ಮತ್ತು ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಅಂತಹವರ ಬಗ್ಗೆ ಜರುಗಿಸುವ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಭೇಟಿ ಮಾಡಿ ಮಾಹಿತಿಯನ್ನು ನೀಡಿದ್ದಾರೆ.
ಈ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಅವರು ʻʻಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದರೆ ಅಂತಹವರನ್ನು ಅಮಾನತುಗೊಳಿಸಲಾಗುವುದು. ಗಣಿ ನಡೆಸುವವರು ಎಷ್ಟೇ ಪ್ರಭಾವಿಗಳಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆʼʼ ಎಂದು ಹೇಳಿದರು.
ಇದನ್ನು ಓದಿ: ಅಕ್ರಮ ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ, ಸಿಬಿಐ ತನಿಖೆಗೆ ಆಗ್ರಹ
‘ಈ ವಾರವೇ ಮಂಡ್ಯಕ್ಕೆ ಭೇಟಿ ನೀಡಿ ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಪರಿಶೀಲಿಸಲಾಗುವುದು. ನಮ್ಮೊಂದಿಗೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ. ಈ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವುದು ಕಂಡು ಬಂದರೆ ಸ್ಥಳದಲ್ಲೇ ಅಮಾನತು ಮಾಡುತ್ತೇನೆ’ ಎಂದು ಎಚ್ಚರಿಕೆ ನೀಡಿದರು.
ಫೆಬ್ರುವರಿ 22 ರಂದು ಮಂಡ್ಯ ಜಿಲ್ಲೆಯ ಗಣಿಗಾರಿಕೆ ಪ್ರದೇಶಗಳಿಗೆ ಸಂಸದರು ಮತ್ತು ಜನಪ್ರತಿನಿಧಿಗಳ ಜತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್.ಎಸ್ ಅಣೆಕಟ್ಟಿನ ಸುತ್ತಮುತ್ತ 15 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ’ ಎಂದು ತಿಳಿಸಿದರು.
ಮಂಡ್ಯ ಸಂಸದರು ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತದೆ ಎಂದು ನನ್ನ ಗಮನಕ್ಕೆ ತಂದ ಕೂಡಲೇ ಈ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಯಾರೂ ಆತಂಕ ಪಡಬೇಕಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 38 ಗಣಿಗಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಗಾರಿಕೆ ನಡೆಯುತ್ತಿಲ್ಲ’ ಎಂದು ಸಚಿವರು ಮಾಹಿತಿ ನೀಡಿದರು.