ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ.
ಎಸ್ ಸಿ ಸಮುದಾಯಕ್ಕೆ ಶೇ.15ರಿಂದ 17ಕ್ಕೆ ಮೀಸಲಾತಿ ಹೆಚ್ಚಳ ಹಾಗೂ ಎಸ್ ಟಿ ಸಮುದಾಯಕ್ಕೆ ಶೇ.3ರಿಂದ 7ಕ್ಕೆ ಮೀಸಲಾತಿ ಹೆಚ್ಚಳ ಮಾಡಲು ಅನುಮೋದನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನ್ಯಾ.ನಾಗಮೋಹನ್ ದಾಸ್ ಅವರ ವರದಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು ಎಂದರು.
ಇನ್ನು ಬೇರೆ ಬೇರೆ ಸಮುದಾಯಗಳಿಗೂ ಮೀಸಲಾತಿ ನಿಟ್ಟಿನಲ್ಲಿ ಒಳ ಮೀಸಲಾತಿ ಬಗ್ಗೆಯೂ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸದಾಶಿವ ಆಯೋಗದ ವರದಿ ಬಗ್ಗೆ ಪರಿಶೀಲನೆ ನಡೆಸಿ ಬೇರೆ ಬೇರೆ ಸಮುದಾಯಗಳ ಮೀಸಲಾತಿ ಹೆಚ್ಚಳದ ಬಗ್ಗೆಯೂ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಚಿವರುಗಳಾದ ಬಿ. ಶ್ರೀರಾಮುಲು, ಬಿ.ಸಿ. ನಾಗೇಶ್ ಉಪಸ್ಥಿತರಿದ್ದರು.