ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಪ್ರಧಾನಿ ಮೋದಿ ರಾಜಕೀಯ ಒತ್ತಡಕ್ಕೆ ಸಿಲುಕಿದ್ದು, ದೇಶದ ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವ ವ್ಯಕ್ತಿ ಅವರೇ ಎಂದು ಕಾಂಗ್ರೆಸ್ ಆರೋಪಿಸಿದೆ.
ಪ್ರಧಾನಿ ಮೋದಿ ಇತ್ತೀಚೆಗೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸರ್ಕಾರದ ಈ ಕ್ರಮವು ತಡವಾಗಿ ಬಂದ ಪ್ರತಿಕ್ರಿಯೆಯಾಗಿದ್ದು, ಕಳೆದ ಹಲವು ವರ್ಷಗಳಲ್ಲಿ ನಡೆದ ಪರೀಕ್ಷಾ ಅಕ್ರಮಗಳಿಗೆ ಸರ್ಕಾರವೇ ಹೊಣೆ ಎಂದು ಟೀಕಿಸಿದರು.
ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಆದರೆ, ತಪ್ಪಿತಸ್ಥರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕಾರಣದಿಂದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿದಿದೆ ಎಂದು ಪಕ್ಷ ಹೇಳಿದೆ.
ಇದನ್ನೂ ಓದಿ : ದೆಹಲಿ ಪ್ರತಿಭಟನೆ ಅರ್ಜಿ: ‘ನಮ್ಮ ಸಮಯ ವ್ಯರ್ಥ ಮಾಡಬೇಡಿ’ – ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ರಾಹುಲ್ ಗಾಂಧಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಮತ್ತು ಪೊಲೀಸ್ ಕ್ರಮವನ್ನು ಖಂಡಿಸಿದ್ದು, ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸರ್ಕಾರವನ್ನು ಟೀಕಿಸಿ, ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆಯನ್ನು ಸರ್ಕಾರವೇ ಹಾಳು ಮಾಡಿದೆ ಎಂದು ಆರೋಪಿಸಿದರು. ಪರೀಕ್ಷಾ ಅಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.
ಇದನ್ನೂ ನೋಡಿ : ನೀಟ್ ಹಗರಣ: ದೆಹಲಿ ಹೋರಾಟಕ್ಕೆ ಮತ್ತಷ್ಟು ಬಲ! ಎನ್‌ಡಿಎ ಮಿತ್ರಪಕ್ಷಗಳ ಮೌನ ಏಕೆ? Janashakthi Media
