ಹಾಸನ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್(ಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರ್ ಸ್ವಾಮಿ ಅವರು ಸೋಮವಾರ ಹೇಳಿದ್ದಾರೆ. ಇದನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಹಾಸನ ತಾಲ್ಲೂಕಿನ ಚನ್ನಂಗಿಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳಿವೆ, ಅದೆಲ್ಲವನ್ನೂ ಸರಿಪಡಿಸಿಕೊಳ್ಳುತ್ತೇವೆ. ಮಂಡ್ಯ ಜಿಲ್ಲೆಯಲ್ಲಿ ಪ್ರತಿದಿನ ಒಂದು ಧಾರವಾಹಿ ಇರಲೇಬೇಕು. ಅಂದು ನಿಖಿಲ್ ಚುನಾವಣೆಗೆ ನಿಂತಾಗ ರಾಜಕೀಯವಾಗಿ ಮುಗಿಸಲು ಧಾರವಾಹಿ ಮಾಡಿದ್ದರು. ಅದೇ ರೀತಿ ಈಗಲೂ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈ ಧಾರವಾಹಿ ನಡೆಯುತ್ತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ತಾಕತ್ತಿದ್ದರೆ ಗ್ಯಾರೆಂಟಿ ಯೋಜನೆ ನಿಲ್ಲಿಸುವ ಘೋಷಣೆ ಮಾಡಿ: ಅಮಿತ್ ಶಾಗೆ ಸಿದ್ದರಾಮಯ್ಯ ಸವಾಲು
ಬಿಜೆಪಿ-ಜೆಡಿಎಸ್ ನಡುವೆ ಸೀಟು ಹಂಚಿಕೆ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ. “ನಾವು ಈ ಭ್ರಷ್ಟ ಸರ್ಕಾರವನ್ನು ಉರುಳಿಸಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಬಯಸುತ್ತೇವೆ. ಎನ್‌ಡಿಎ ಗೆಲುವು ಸಾಧಿಸುವುದು ನಮ್ಮ ಗುರಿ. ಬೇರೆಯವರ ಕ್ಷೇತ್ರಗಳನ್ನು ಕಸಿದುಕೊಳ್ಳುವ ಉದ್ದೇಶ ನಮಗಿಲ್ಲ” ಎಂದು ಅವರು ಹೇಳಿದ್ದಾರೆ. ನರೇಂದ್ರ ಮೋದಿ ಅವರು ಇಡೀ ವಿಶ್ವದಲ್ಲೆ ಚರ್ಚೆ ಮಾಡುವಂತಹ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಂತವರು ದೇವೇಗೌಡರಂತಹ ರೈತನ ಮಗನನ್ನು ತುಂಬಾ ಗೌರವದಿಂದ ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.
”ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 14 ಬಜೆಟ್ ಮಂಡಿಸಿದ್ದಾರೆ. ಆದರೂ ಅವರು ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕೇಂದ್ರ-ರಾಜ್ಯ ಸಂಬಂಧಗಳ ನಡುವಿನ ಬಿರುಕುಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
15ನೇ ಹಣಕಾಸು ಆಯೋಗವು ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಸಿದ್ದರಾಮಯ್ಯ ಈಗ ಹೇಳುತ್ತಿದ್ದಾರೆ. ಹಣಕಾಸು ಆಯೋಗವು ಸಂವಿಧಾನದ ನಿಬಂಧನೆಗಳ ಪ್ರಕಾರ ಕಾರ್ಯನಿರ್ವಹಿಸುತ್ತದೆ ಎಂದು ಅವರು ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ವಿಡಿಯೊ ನೋಡಿ: ಗ್ರಂಥಾಲಯ ಸಮ್ಮೇಳನ : ಗ್ರಂಥಾಲಯಗಳು ಶ್ರೀಸಾಮಾನ್ಯರ ವಿಶ್ವವಿದ್ಯಾಲಯಗಳು Janashakthi Media