ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಯನ್ನು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ಹೆಚ್.ಪಿ. ನರಸಿಂಹಮೂರ್ತಿ, ಕಾನ್ಸ್ ಟೇಬಲ್ ಚಂದ್ರಶೇಖರ್ ಅವರನ್ನು ಎಂಪಿ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಶಾಸಕರ ಭವನದ ಬಳಿ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಅವರು ವಾಹನದ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಪೊಲೀಸ್ ಸಿಬ್ಬಂದಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದು, ಈ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಎಸಿಪಿ ಶಾಸಕರನ್ನು ಸಮಾಧಾನಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.