ಮುಡಾದಿಂದ ಪಡೆದ ಸೈಟ್‌ಗಳು ವಾಪಸ್‌; ಮುಡಾಗೆ ಪತ್ರ ಬರೆದ ಸಿಎಂ ಪತ್ನಿ ಪಾರ್ವತಿ

ದ್ವೇಷ ಸಾಧನೆಗೆ ರಾಜಕೀಯ ಕುಟುಂಬದ ಹೆಣ್ಣುಮಕ್ಕಳನ್ನು ಎಳೆದುತರಬೇಡಿ; ಸಿದ್ದರಾಮಯ್ಯ ಪತ್ನಿ ಭಾವುಕ ಪತ್ರ

ಮೈಸೂರು : ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಗರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

ಮುಡಾ ನಿವೇಶನಗಳನ್ನು ವಾಪಸ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ನಿರ್ಧರಿಸಿದ್ದಾರೆ. ಈ ಸಂಬಂಧ ಮುಡಾ ಆಯುಕ್ತರಿಗೆ ಅವರು ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದ ಬೆನ್ನಲ್ಲೇ ಪಾರ್ವತಿ ಅವರು ಪರಿಹಾರವಾಗಿ ಪಡೆಯಲಾದ 14 ನಿವೇಶಗಳನ್ನು ಮುಡಾಗೆ ಹಿಂತಿರುಗಿಸಲು ಒಪ್ಪಿದ್ದಾರೆ.

ಪತ್ರದಲ್ಲಿ ಏನಿದೆ? ಮೈಸೂರು ತಾಲ್ಲೂಕು, ಕಸಬಾ ಹೋಬಳಿ ಕೆಸರೆ ಗ್ರಾದ ಸರ್ವೇ ನಂಬರ್ 464 ರಲ್ಲಿನ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರ ಭೂ ಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ. ಮುಂದುವರೆದಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮುಡಾಗೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಅದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದಿದ್ದಾರೆ.

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 40 ವರ್ಷದ ಸುಧೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನನ್ನ ಸ್ವಂತ ಸೋದರ ಅರಿಶಿನ- ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರಿಗೆ ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡಾ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ14 ನಿವೇಶನಗಳನ್ನು ವಾಪಸ್ ನೀಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೂಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ ಎಂದು ತಿಳಿಸಿದ್ದಾರೆ.

ಆರೋಪ ಕೇಳಿಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು,ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸ್ ಮಾಡಬೇಕೆಂಬ ನಿರ್ಧಾರ ಕೈಬಿಟ್ಟಿದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸ್ ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ.

ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು, ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾದನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *