ಮುಗಿಯದ ಆಯ್ಕೆ ಪ್ರಕ್ರಿಯೆ: ರಾಜ್ಯಸಭೆ-ಪರಿಷತ್‌ ಟಿಕೆಟ್‌ಗಾಗಿ ದೆಹಲಿಯಲ್ಲಿ ಬೀಡುಬಿಟ್ಟಿರುವ ರಾಜ್ಯ ಕಾಂಗ್ರೆಸ್‌ ನಾಯಕರು

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಈಗಾಗಲೇ ಚುನಾವಣಾ ದಿನಾಂಕಗಳು ಘೋಷಣೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಯ  ಕಸರತ್ತು ಕಗ್ಗಂಟಾಗಿ ಪರಿಣಮಿಸಿದೆ. ರಾಜ್ಯಸಭೆಯ ಒಂದು ಸ್ಥಾನ ಹಾಗೂ ವಿಧಾನ ಪರಿಷತ್​ನ ಎರಡು ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಲು ಸಾಕಷ್ಟು ಮಂದಿ ಪೈಪೋಟಿ ನಡೆಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ದೆಹಲಿಗೆ ತೆರಳಿದ್ದಾರೆ. ಕಳೆದ ಒಂದು ವಾರದಿಂದ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿದರೂ ಸಹ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಹಾಗಾಗಿ, ಅಂತಿಮ ನಿರ್ಧಾರವನ್ನು ಹೈಕಮಾಂಡ್ ನಾಯಕರ ಅಂತಿಮ ತೀರ್ಮಾನಕ್ಕಾಗಿ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗ ರಾಜ್ಯ ಕಾಂಗ್ರೆಸ್‌ ನಾಯಕರು, ಅವರ ಸೂಚನೆಯಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲ ಜೊತೆಗೆ ಮಾತ್ರ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ರಾಜ್ಯಸಭೆ ಟಿಕೆಟ್‌ಗಳ ಬಗ್ಗೆ ನಾವು ಚರ್ಚೆ ಮಾಡಿಲ್ಲ. ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಚಿಂತನ-ಮಂಥನದಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉದಯಪುರದಿಮದ ನೇರವಾಗಿ ದೆಹಲಿಗೆ ತೆರಳಿ ವಾಸ್ತವ್ಯ ಹೂಡಿದ್ದಾರೆ.

ಉದಯಪುರದಿಂದ ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಪ್ರಮುಖ ಅಭ್ಯರ್ಥಿ ಆಕಾಂಕ್ಷಿಗಳು ಭೇಟಿ ಮಾಡಿ ದುಂಬಾಲು ಬಿದ್ದಿದ್ದಾರೆ. ವಿಧಾನ ಪರಿಷತ್ತಿಗೆ ಎಸ್.ಆರ್.ಪಾಟೀಲ್, ಎಸ್.ಮನೋಹರ್, ಡಾ.ಪುಷ್ಪ ಅಮರನಾಥ್ ಸೇರಿದಂತೆ ಹತ್ತಕ್ಕೂ ಹೆಚ್ಚು ಆಕಾಂಕ್ಷಿಗಳು ಕಾಂಗ್ರೆಸ್‌ ಪಕ್ಷದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಮೇಲ್ಮನೆಯಿಂದ ನಿವೃತ್ತಿಯಾಗುತ್ತಿರುವ ಮೂವರು ಸದಸ್ಯರ ಪೈಕಿ ವೀಣಾ ಅಚ್ಚಯ್ಯ ಅವರನ್ನು ಹೊರತುಪಡಿಸಿ ಉಳಿದ ಇಬ್ಬರು ಸದಸ್ಯರಾದ ಅಲ್ಲಂ ವೀರಭದ್ರಪ್ಪ ಹಾಗೂ ಆರ್.ಬಿ.ತಿಮ್ಮಾಪುರ್ ಅವರು ಸಹ ಲಾಬಿ ನಡೆಸುತ್ತಿದ್ದು, ಮರು ಆಯ್ಕೆಗೆ ಕಸರತ್ತಿನಲ್ಲಿ ಮುಳುಗಿದ್ದಾರೆ.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಒಂದು ಹಂತದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿ ತಮ್ಮ ಆಶಯ ವ್ಯಕ್ತಪಡಿಸಿದ್ದು, ಇನ್ನೊಂದೆಡೆ ರಾಷ್ಟ್ರೀಯ ನಾಯಕರು ಅನಿವಾಸಿ ಭಾರತೀಯ ಹಾಗೂ ರಾಜ್ಯ ಸರ್ಕಾರದ ನಿಕಟಪೂರ್ವ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣರನ್ನು ಈ ಬಾರಿ ವಿಧಾನ ಪರಿಷತ್ತಿಗೆ ಕಳುಹಿಸಿಕೊಡುವ ಚಿಂತನೆಯಲ್ಲಿದೆ ಎನ್ನಲಾಗಿದೆ. ರಾಷ್ಟ್ರೀಯ ನಾಯಕರ ಈ ತೀರ್ಮಾನ ರಾಜ್ಯ ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ಸಾಕಷ್ಟು ನಿರಾಸೆ ಮೂಡಿಸಿದ್ದು, ರಾಜ್ಯದ ಪ್ರತಿನಿಧಿಗಳಿಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಇನ್ನೊಂದೆಡೆ, ರಾಜ್ಯಸಭೆ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಆಕಾಂಕ್ಷಿಗಳಲ್ಲಿ ಪೈಪೋಟಿ ಏರ್ಪಟ್ಟಿದೆ. ಖಾಲಿಯಾದ ಸ್ಥಾನಗಳ ನಾಲ್ಕರ ಪೈಕಿ ಮೂವರು ಕಾಂಗ್ರೆಸ್ ಸದಸ್ಯರಾಗಿದ್ದರು. ಆದರೆ, ಕೆ.ಸಿ.ರಾಮಮೂರ್ತಿ ಮಧ್ಯದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಮರು ಆಯ್ಕೆಗೊಂಡಿದ್ದರು. ಉಳಿದ ಇಬ್ಬರ ಪೈಕಿ ಕಾಂಗ್ರೆಸ್​ನ ಸದಸ್ಯರಾಗಿದ್ದ ಆಸ್ಕರ್ ಫರ್ನಾಂಡಿಸ್ ನಿಧನರಾಗಿದ್ದು, ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಬೇಕೆಮದು ಕೇಳಿಬರುತ್ತಿದೆ. ಹಾಲಿ ಸದಸ್ಯರಾಗಿರುವ ಜಯರಾಮ್ ರಮೇಶ್ ಅವರು ಮರು ಆಯ್ಕೆಗೆ ಆಸಕ್ತಿ ತೋರಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ನೀಡಬೇಕೆಂದು ಎನ್ನುವುದರೊಂದಿಗೆ ರಾಜ್ಯಸಭೆ ಮಾಜಿ ಸದಸ್ಯ ಪ್ರೊ. ಎಂ.ವಿ.ರಾಜೀವ್ ಗೌಡ, ತುಮಕೂರು ಮಾಜಿ ಸಂಸದ ಎಸ್.​ಪಿ.ಮುದ್ದಹನುಮೇಗೌಡ ಸೇರಿದಂತೆ ಹಲವರು ಕೆಪಿಸಿಸಿ ಅಧ್ಯಕ್ಷರು ಹಾಗೂ ಪ್ರತಿಪಕ್ಷ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರ ಒತ್ತಡದ ಜೊತೆಗೆ ಹಾಲಿ ಸದಸ್ಯರು ಮತ್ತು ಆಯ್ಕೆಗೂ ಒತ್ತಡ ಹೇರುತ್ತಿದ್ದು ಸಮಸ್ಯೆಯನ್ನು ಸ್ಥಳೀಯವಾಗಿ ಪರಿಹರಿಸಿಕೊಳ್ಳಲು ಸಾಧ್ಯವಾಗದ ಮಟ್ಟಕ್ಕೆ ರಾಜ್ಯ ಕಾಂಗ್ರೆಸ್‌ನಲ್ಲಿ ತಲೆದೂರಿದೆ.

ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ವರಿಷ್ಠರು ಚರ್ಚೆ ನಡೆಸಿದ್ದು, ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಅಂತಿಮಗೊಂಡು ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬಂದಿದ್ದು, ನಾಳೆ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Donate Janashakthi Media

Leave a Reply

Your email address will not be published. Required fields are marked *