ಬೆಂಗಳೂರು: ಗುರುವಾರ ಅಹೋರಾತ್ರಿ ಧರಣಿ ನಡೆಸಿದ ಕಾಂಗ್ರೆಸ್ ಶಾಸಕರು, ಇಂದು ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಭಟನೆ ಮುಂದುವರಿಸಿದರು. ಸದನ ಆರಂಭವಾಗುತ್ತಿದ್ದಂತೆ ಗದ್ದಲ ಉಂಟಾದಾದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಹತ್ತು ನಿಮಿಷ ಕಾಲ ಮುಂದೂಡಿದರು.
ಸದನದಲ್ಲಿ ಪ್ರಶ್ನೋತ್ತರ ಕಲಾಪ ಆರಂಭವಾದರೂ, ಮತ್ತೆ ಕಾಂಗ್ರೆಸ್ ಧರಣಿ, ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ವಾಕ್ಸಮರ ತೀವ್ರಗೊಂಡಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಸಭಾಪತಿ ಹೊರಟ್ಟಿ ಅವರು ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.
ರಾಷ್ಟ್ರಧ್ವಜ ಹಾರಿಸುವ ವಿಚಾರದಲ್ಲಿ ದೇಶಕ್ಕೆ ಅವಮಾನವಾಗುವ ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪರವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಸದಸ್ಯರು ನಡೆಸುತ್ತಿರುವ ಧರಣಿ ಇಂದು ಸಹ ಮುಂದುವರಿಯಿತು.
ಕಾಂಗ್ರೆಸ್ ಸದಸ್ಯರು ಬಾವಿಗಿಳಿದು ಭಿತ್ತಿಪತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧವು ಧಿಕ್ಕಾರ ಕೂಗಿದರು.
ʻತಾವೂ ಸೇರಿದಂತೆ ವಿರೋಧ ಪಕ್ಷದ ಸದಸ್ಯರ ಜೀವಕ್ಕೆ ಬೆದರಿಕೆ ಇದೆ. ರಕ್ಷಣೆ ಕೊಡಬೇಕು’ ಎಂದು ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು.