ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಏಪ್ರಿಲ್ 14ರಂದು ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಪಡಿಸಿದ್ದ ಕಾಂಗ್ರಸ್ ನಾಯಕರು ರೇಸ್‌ಕೋರ್ಸ್ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಐಪಿಸಿ 143, 341 ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.
ಇದನ್ನು ಓದಿ: ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ; ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಪೊಲೀಸರು
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಒಟ್ಟು 36 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಪ್ರಿಯಾಂಕ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ, ಕೆ.ಎಸ್. ಉಗ್ರಪ್ಪ, ಧ್ರುವನಾರಾಯಣ್, ಮುಖಂಡರಾದ ಟಿ.ಬಿ. ಜಯಚಂದ್ರ, ಐವಾನ್ ಡಿಸೋಜ, ಪ್ರಕಾಶ್ ರಾಥೋಡ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ 36 ಮಂದಿಯನ್ನು ಆರೋಪಿಯನ್ನಾಗಿ ಮಾಡಲಾಗಿದೆ.
ಇದನ್ನು ಓದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್. ಈಶ್ವರಪ್ಪ
ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40 ಪರ್ಸೆಂಟೇಜ್ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಈಶ್ವರಪ್ಪ ಕಾರಣ. ಹೀಗಾಗಿ ಈಶ್ವರಪ್ಪನವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದರು.
ಶಿವಕುಮಾರ್ ಪ್ರತಿಕ್ರಿಯೆ
ಎಫ್‍ಐಆರ್ ದಾಖಲಾಗಿರುವುದಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಮುಖ್ಯಮಂತ್ರಿ ಮನೆಗೆ ಹೋಗುವಾಗ ಬಂಧಿಸಿ ಬಿಡುಗಡೆ ಮಾಡಿದ್ದರು. ಈಗ ಎಫ್‍ಐಆರ್ ಹಾಕಿದ್ದಾರೆ. ಈಶ್ವರಪ್ಪ ಜತೆ ನೂರಾರು ಜನರು ಮೆರವಣಿಗೆ, ಪ್ರತಿಭಟನೆ ಮಾಡಿದ್ದರು. ಕೆ.ಎಸ್.ಈಶ್ವರಪ್ಪ ಮೇಲೆ ಯಾಕೆ ಯಾವುದೇ ಕೇಸ್ ಹಾಕಿಲ್ಲ. ರಾಜ್ಯ ಸರ್ಕಾರ ನಮ್ಮ ಮೇಲೆ ಮಾತ್ರ ಕೇಸ್ ಹಾಕುತ್ತಿದೆ. ನೈತಿಕ ಪೊಲೀಸ್ಗಿರಿಯಲ್ಲಿ ತಪ್ಪೇನು ಅಂತ ಮುಖ್ಯಮಂತ್ರಿ ಹೇಳಿದ್ರು. ಮುಖ್ಯಮಂತ್ರಿಯಿಂದಲೇ ನೈತಿಕ ಪೊಲೀಸ್ಗಿರಿಗೆ ಕುಮ್ಮಕ್ಕು ನೀಡಲಾಗುತ್ತಿದೆ. ಚರ್ಚ್ನಲ್ಲಿ ಆಂಜನೇಯ ಮಂತ್ರ ಪಠಣ ಮಾಡಿದರು, ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ ಮಾಡಿದ್ರು, ಅಡ್ಡಿಪಡಿಸಿದವರ ಮೇಲೆ ಮುಖ್ಯಮಂತ್ರಿ ಯಾಕೆ ಕೇಸ್ ಹಾಕಲಿಲ್ಲ? ಎಂದು ಪ್ರಶ್ನಿಸಿದ್ದಾರೆ.