ಮಂಡ್ಯ: ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಆರಂಭಿಸಬೇಕು ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಸದಸ್ಯರು ಜಂಟಿಯಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಧರಣಿ ಆರಂಭಿಸಿದ ರೈತರು ಸೇರಿದಂತೆ ವಿವಿಧ ಸಂಘಟನೆಗಳು ಮೈಷುಗರ್ ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲೇ ಆರಂಭಿಸಬೇಕು ಹಾಗೂ ಬೆಂಗಳೂರಿನ ಆಯುಕ್ತರ ಕಚೇರಿ ಹಾಗೂ ಮಂಡ್ಯ ಕಬ್ಬು ಸಂಶೋಧನೆ ಕೇಂದ್ರವನ್ನು ಬೆಳಗಾವಿಗೆ ಸ್ಥಳಾಂತರ ಮಾಡಬಾರದೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ಇದನ್ನು ಓದಿ: ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡಬೇಡಿ – ಎಚ್.ಡಿ. ಕುಮಾರಸ್ವಾಮಿ ಆಗ್ರಹ
ಕೂಡಲೇ ಸರಕಾರ ಸದನದಲ್ಲಿ ಮೈಷುಗರ್ ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿಯೇ ಆರಂಭಿಸುವ ಬಗ್ಗೆ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ. ಈಗಾಗಲೇ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವುದನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಈ ಭಾಗದ ರೈತರು ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮೈಷುಗರ್ ಕಾರ್ಖಾನೆಯನ್ನು ಗುತ್ತಿಗೆ ನೀಡುವುದಿಲ್ಲ ಎಂದು ಲಿಖಿತ ರೂಪದಲ್ಲಿ ಸರ್ಕಾರ ಬರೆದು ಕೊಡಬೇಕು. ಯಾವುದೇ ಕಾರಣಕ್ಕೂ ಖಾಸಗಿಗೆ ಗುತ್ತಿಗೆಗೆ ನೀಡಬಾರದು. ಅಲ್ಲಿಯವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ಆಗ್ರಹಿಸಲಾಗುತ್ತಿದೆ.
ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕಾರ್ಖಾನೆ ಆರಂಭಿಸಲು 100 ಕೋಟಿ ರೂ. ಹಾಗೂ ಆಧುನಿಕ ಹೊಸ ಕಾರ್ಖಾನೆ ತೆರೆಯಲು 400 ಕೋಟಿ ರೂ. ಅನುದಾನ ಮೀಸಲಿಡುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಆದರೆ ನಂತರ ಬಂದ ಬಿಜೆಪಿ ಸರಕಾರ 40 ವರ್ಷಗಳ ಕಾಲ ಖಾಸಗಿಯವರಿಗೆ ಗುತ್ತಿಗೆ ನೀಡಲು ಮುಂದಾಗಿತ್ತು. ಹೋರಾಟದ ನಂತರ ನಿರ್ಧಾರ ವಾಪಸು ಪಡೆದಿದೆ. ಆದರೆ ಕಾರ್ಖಾನೆ ಆರಂಭವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಸಕ್ತ ವಿಧಾನಸಭಾ ಅಧಿವೇಶನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮೈಷುಗರ್ ಕುರಿತು ವಿಷಯ ಪ್ರಸ್ತಾಪಿಸಿ ಚರ್ಚೆ ನಡೆಸಿ, ಕಾರ್ಖಾನೆಯನ್ನು ಸರ್ಕಾರವೇ ನಡೆಸಬೇಕೆಂದು ಆಗ್ರಹಿಸಲು ಕೋರಿರುವ ಪ್ರತಿಭಟನಾಕಾರರು ಇಲ್ಲವಾದಲ್ಲಿ ದೊಡ್ಡಮಟ್ಟದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಅನಿರ್ದಿಷ್ಟಾವಧಿ ಹೋರಾಟಕ್ಕೆ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬೆಂಬಲ ಸೂಚಿಸಿವೆ.