ಮೈಸೂರು :ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಹಂಪಾ ನಾಗರಾಜಯ್ಯ ಅವರಿಂದ ಮೈಸೂರು ದಸರಾ ಉದ್ಘಾಟಿಸಲಾಗುವುದು ಎಂದರು.
ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ನಡೆದಿದ್ದು, ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ, ‘ಹಂಪನಾ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿದ್ದಾರೆ. ಹಂಪ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರು.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿದರು. ಸೆಂಟ್ರಲ್ ಕಾಲೇಜಿಗೆ ಸೇರಿದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ.