ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಾಳೆ ಸಂಜೆ 5 ಗಂಟೆಗೆ ವಿಧಾನ ಸೌಧದಲ್ಲಿ ಮಹತ್ವದ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಕೊರೊನಾ ತಡೆಗೆ ಸರ್ಕಾರದಿಂದ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ನಿನ್ನೆ ಒಂದೇ ದಿನ 921 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,38,890 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಈಗಾಗಲೇ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದಾಗ್ಯೂ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಮಹಾರಾಷ್ಟ್ರದ ಹಲವೆಡೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.
ಹೀಗಾಗಿ ಸಿಎಂ ಬಿಎಸ್ವೈ ಕರೆದಿರುವ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಕರೊನಾ 2ನೇ ಅಲೆಯ ಭೀತಿ ಬಗ್ಗೆ ತಜ್ಞರು ಎಚ್ಚರಿಕೆ ಗಂಟೆ ಬಾರಿಸಿದ್ದು, ಬಳ್ಳಾರಿ ಸಹಿತ ಕೆಲವು ಜಿಲ್ಲೆಗಳಲ್ಲಿ ರೂಪಾಂತರಿ ಕರೊನಾ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಮುಂಜಾಗ್ರತೆಗೆ ಹೆಚ್ಚಿನ ಆಧ್ಯತೆ ನೀಡಬೇಕು, ದೈಹಿಕ ಅಂತರ ಮತ್ತು ಮಾಸ್ಕ್ ಕಡ್ಡಾಯ ಗೊಳಿಸುವಂತೆ ಸೂಚಿಸಲಾಗಿದೆ.