ಬೆಂಗಳೂರು : ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರ ಪುತ್ರರಾಗಿರುವ ಜಲಮಂಡಳಿ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಕಚೇರಿ ಮತ್ತು ನಿವಾಸದ ಮೇಲೆ ನಮ್ಮ ಪೊಲೀಸರು ದಾಳಿ ನಡೆಸಿ ಇದುವರೆಗೂ 8.12 ಕೋಟಿ ರೂ.ನಗದು ವಶಪಡಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಇದುವರೆಗೂ 5 ಮಂದಿಯನ್ನು ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಪಾಟೀಲರು ವಿವರಣೆ ನೀಡಿದರು.

ಪ್ರಶಾಂತ್ ಅವರ ಖಾಸಗಿ ಕಚೇರಿಗೆ ಲಂಚ ನೀಡಲು ಬಂದಿದ್ದ ಮೂವರು ಆರೋಪಿಗಳು, ಆ ಸಂಸ್ಥೆಯ ಅಕೌಟೆಂಟ್ ಹಾಗೂ ಪ್ರಶಾಂತ್ ಮಾಡಾಳ್ ಸೇರಿದಂತೆ ಐದು ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿ, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಘಟನೆ ಕುರಿತಂತೆ ಲೋಕಾಯುಕ್ತ ಪೊಲೀಸರುತನಿಖೆ ನಡೆಸುತ್ತಿದ್ದು, ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾರ್ಯಾಚರಣೆ ನಡೆಸಿದ ವೇಳೆ ಟೆಂಡರ್ ಗೆ ಸಂಬಂಧ ಪಟ್ಟಂತೆ ಲಂಚ ನೀಡಲು ಬಂದಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಾನೂನಿನ ಪ್ರಕಾರ ಲಂಚ ನೀಡುವುದು ಕೂಡ ಅಪರಾಧವಾಗಿದೆ ಎಂದು ಅವರು ವಿವರಿಸಿದರು.
ಇದನ್ನು ಓದಿ : ₹40 ಲಕ್ಷ ಲಂಚ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ
ದೂರುದಾರ ನೀಡಿದ ದೂರಿನ ಮೇರೆಗೆ ಕಾರ್ಯಚರಣೆ ನಡೆಸಿ ಪ್ರಶಾಂತ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ ಪೊಲೀಸರ ಕಾರ್ಯಚರಣೆಯನ್ನು ಶ್ಲಾಘಿಸಿದರು.
ಲೋಕಾಯುಕ್ತ ಸಂಸ್ಥೆಗೆ ಮತ್ತಷ್ಟು ಸಿಬ್ಬಂದಿಗಳ ಅವಶ್ಯಕತೆ ಇದ್ದು, ಮುಂದಿನ ದಿನಗಳಲ್ಲಿ ಸಿಬ್ಬಂದಿ ನೇಮಕಾತಿ ಮಾಡಿಕೊಂಡು ಸಂಸ್ಥೆಯನ್ನು ಮತ್ತಷ್ಟು ಸದೃಢಗೊಳಿಸಿ ಭ್ರಷ್ಟರ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ವಿವರಿಸಿದರು.