ರಾಜ್ಯದಾದ್ಯಂತ ಮೇ 4 ರಂದು ನೀಟ್‌ ಪರೀಕ್ಷೆ: 4 ಕೇಂದ್ರಗಳಲ್ಲಿ ಪರೀಕ್ಷೆ

ದೇವನಹಳ್ಳಿ: ಮೇ 4 ರಂದು ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ ಪ್ರವೇಶಾತಿ ಕಲ್ಪಿಸಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ರಾಜ್ಯದಾದ್ಯಂತ ನಡೆಯುತ್ತಿದ್ದು, ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಮೇ 2 ಶುಕ್ರವಾರದಂದು ನಡೆದ ನೀಟ್‌-2025 ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಲ್ಲೂಕು ಕಚೇರಿ ರಸ್ತೆಯ ಸರ್ಕಾರಿ ಪದವಿ ಕಾಲೇಜು(ಪ್ರೌಢಶಾಲಾ ವಿಭಾಗ) ಇಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ನೀಟ್‌ ಪರೀಕ್ಷೆಯು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸಿದ್ಧತೆ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಲು ನಾಲ್ಕು ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಭದ್ರತೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ: 8 ಮಂದಿ ಬಂಧನ

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯವಸ್ಥೆ, ಸಿ.ಸಿ ಕ್ಯಾಮೆರಾ ಅಳವಡಿಕೆ, ಆಂಬುಲೆನ್ಸ್ ಸೇವೆ , ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವ್ಹೀಲ್‌ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ವಹಿಸಿ ಎಂದು ಅಧಿಕಾರಿಗಳು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು ಉಪಸ್ಥಿತರಿದ್ದರು.

ಸೂಚನೆಗಳು

  • ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು.
  • ವಿದ್ಯಾರ್ಥಿಗಳಿಗೆ ಸಲಹೆ ಸೂಚನೆ ಪರೀಕ್ಷೆಯ ದಿನ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಹಾಜರಾಗಬೇಕು.
  • ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ ಆಧಾರ್ ಕಾರ್ಡ್ ಪ್ಯಾನ್‌ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ತರಬೇಕು.
  • ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ತೆರಳಬೇಕು.
  • ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು ಪ್ರವೇಶ ಪತ್ರದಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸೂಚಿಸಿದರು.

ಇದನ್ನೂ ನೋಡಿ: ಮೇ ದಿನ | ಸ್ವದೇಶಿ ಎನ್ನುವ ಸರ್ಕಾರ ವಿದೇಶಿ ಬಂಡವಾಳಿಗರಿಗೆ ರತ್ನಗಂಬಳಿ ಹಾಸುತ್ತಿರುವುದೇಕೆ? – ಡಾ. ಕೆ.ಪ್ರಕಾಶ್‌

Donate Janashakthi Media

Leave a Reply

Your email address will not be published. Required fields are marked *