ಬೆಂಗಳೂರು: ಶಾಸನಬದ್ಧ ಪ್ರಾಧಿಕಾರಗಳಾದ ಸರಕಾರಿ ಸ್ವಾಮ್ಯದ ಪ್ರಾಧಿಕಾರಗಳು ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ
ಲೈಂಗಿಕ ಅಲ್ಪಸಂಖ್ಯಾತರು, ಎಚ್ಐವಿ ಪೀಡಿತರ ಪರವಾಗಿ ದುಡಿಯುತ್ತಿರುವ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ʼಜೀವʼ ಎನ್ಜಿಓ ಸಂಸ್ಥೆ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಸರಕಾರದ ಎಲ್ಲ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿ 2021ರ ಜು.6ರಂದು ಅಂತಿಮ ಅಧಿಸೂಚನೆ ಪ್ರಕಟಿಸಿದೆ.
ಎಲ್ಲಾ ನೇರ ನೇಮಕಾತಿಗಳಲ್ಲಿ, ಜನರಲ್ ಮೆರಿಟ್, ಎಸ್ಸಿ, ಎಸ್ಟಿ ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಒಂದು ಶೇಕಡಾ ಖಾಲಿ ಹುದ್ದೆಗಳು, ಸರ್ಕಾರವು ನೀಡುವ ಯಾವುದೇ ಸಾಮಾನ್ಯ ಸೂಚನೆಗೆ ಒಳಪಟ್ಟಿರುತ್ತದೆ. ನೇಮಕಾತಿ ವಿಧಾನದ ಮೂಲಕ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಭರ್ತಿ ಮಾಡಿ ಎಂದು ತಿದ್ದುಪಡಿಯಲ್ಲಿ ಹೇಳಲಾಗಿದೆ.
ಸರಕಾರದ ಈ ತಿದ್ದುಪಡಿ ನಿಯಮ ಕೇವಲ ಸರಕಾರಿ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸರಕಾರದ ಇತರೆ ಪ್ರಾಧಿಕಾರ ಹಾಗೂ ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಈ ತಿದ್ದುಪಡಿ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕೆಂಬುದು ನಮ್ಮ ಮನವಿಯಾಗಿದೆ. ಈ ನಿಟ್ಟಿನಲ್ಲಿ ಸರಕಾರಿ ಪ್ರಾಧಿಕಾರ, ನಿಗಮ-ಮಂಡಳಿಗಳಿಗೆ ಸಲಹೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರಕಾರಕ್ಕೆ ಆಗಸ್ಟ್ 18ರಂದು ನಿರ್ದೇಶಿಸಿತ್ತು. ಆದರೆ, ಆದೇಶ ಪಾಲನೆಯಾಗಿಲ್ಲ ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲೆ ಜಯ್ನಾ ಕೊಠಾರಿ ಪೀಠದ ಗಮನಕ್ಕೆ ತಂದರು.
ನ್ಯಾಯಪೀಠವು 2021ರ ಆಗಸ್ಟ್ 18ರಂದು ಹೊರಡಿಸಿರುವ ನಿರ್ದೇಶನವನ್ನು ಪಾಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಕೊನೆಯದಾಗಿ ನಾಲ್ಕು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ.