ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದವರಿಗೆ ಉಚಿತ ಚಿಕಿತ್ಸೆ ಇಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌

ತಿರುವನಂತಪುರಂ: ತಿರುವನಂತಪುರಂ: ಕೋವಿಡ್-19 ಲಸಿಕೆಯನ್ನು ಪಡೆದುಕೊಳ್ಳದೇ ಹಿಂಜರಿಯುವವರ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿರುವ ಕೇರಳ ರಾಜ್ಯ ಸರ್ಕಾರ ಸರ್ಕಾರವು, ಅಂತವರಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಲ್ಲಿ ಅವರಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದರು.

ಕೋವಿಡ್ ಪರಿಶೀಲನಾ ಸಭೆಯಲ್ಲಿ ಕೇರಳ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸಭೆಯ ನಂತರ ರಾಜ್ಯ ಸರ್ಕಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಕೇವಲ ಶೇಕಡಾ 64.8ರಷ್ಟು ಜನಸಂಖ್ಯೆಯು ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದೆ. ಸ್ಥಳೀಯ ಸಂಸ್ಥೆಗಳು ಈ ವಿಚಾರದಲ್ಲಿ ಗಂಭೀರವಾಗಿ ಮಧ್ಯಪ್ರವೇಶಿಸಿ ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳುವವರ ವಿವರಗಳನ್ನು ಸಂಗ್ರಹಿಸಬೇಕು. ರಾಜ್ಯದಲ್ಲಿ ಡಿಸೆಂಬರ್ 1 ರಿಂದ 15 ರವರೆಗೆ ವಿಶೇಷ ಲಸಿಕಾ ಆಂದೋಲನವನ್ನು ಆಯೋಜಿಸಲಾಗಿದೆ. ಮುಂದಿನ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.‌

ಇದನ್ನು ಓದಿ: ಕೇರಳ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದ ನಿರ್ಲಕ್ಷ್ಯ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಮಾತನಾಡಿ ʻʻಪ್ರಸ್ತುತ ವೇಳಾಪಟ್ಟಿಯಂತೆ ಶಾಲೆಗಳಲ್ಲಿ ತರಗತಿಗಳ ಸಮಯ ಮುಂದುವರಿಯುತ್ತದೆ. ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಸುಮಾರು 5,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಲಸಿಕೆ ಪ್ರಮಾಣವನ್ನು ತೆಗೆದುಕೊಳ್ಳದೆ ಶಾಲೆಗಳಿಗೆ ಹಾಜರಾಗುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಯಾರಿಗೂ ನಿಯಮಾವಳಿ ಸಡಿಲಿಸಲು ಸಾಧ್ಯವಿಲ್ಲʼʼ ಎಂದು ಹೇಳಿದರು.

ವಿಕಲಾಂಗ ಮಕ್ಕಳಿಗೆ ಶಾಲೆಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು, ಸದ್ಯಕ್ಕೆ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಯಾರಿಗೂ ಹೆಚ್ಚಿನ ರಿಯಾಯಿತಿಯನ್ನು ನೀಡಲಾಗುವುದಿಲ್ಲ ಎಂದು ಹೇಳಿದರು.

ಸರ್ಕಾರಿ ಸಂಸ್ಥೆಗಳ ಪ್ರತಿನಿಧಿಗಳು ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಳ್ಳಲು ಗಂಭೀರ ಪ್ರಯತ್ನಗಳನ್ನು ಮಾಡಬೇಕು. ಈ ನಿರ್ದೇಶನಗಳು ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕೆಲಸ ಮಾಡುವ ನೌಕರರಿಗೂ ಅನ್ವಯಿಸುತ್ತವೆ. ರೋಗ, ಅಲರ್ಜಿ ಮತ್ತಿತರ ಕಾರಣಗಳಿಂದ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದೇ ಇರುವವರು ಸರಕಾರಿ ವೈದ್ಯರ ಪ್ರಮಾಣ ಪತ್ರ ಹಾಜರುಪಡಿಸಬೇಕು ಎಂದು ಹೇಳಿದರು.

ಎರಡೂ ಡೋಸ್ ತೆಗೆದುಕೊಳ್ಳದ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಸರ್ಕಾರಿ ವೈದ್ಯರ ಪ್ರಮಾಣಪತ್ರವನ್ನು ಹಾಜರುಪಡಿಸಬೇಕು ಅಥವಾ ತರಗತಿಗಳನ್ನು ತೆಗೆದುಕೊಳ್ಳುವ ಮೊದಲು ಅವರು ಲಸಿಕೆ ಹಾಕಿಸಿಕೊಳ್ಳಬೇಕು. ಅಂಥವರು ಪ್ರತಿ ವಾರ ಆರ್‌ಟಿ-ಪಿಸಿಆರ್‌ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ ಮತ್ತು ಈ ಪರೀಕ್ಷೆಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ತೆಗೆದುಕೊಳ್ಳಬೇಕಾಗುತ್ತದೆ. ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹಾಜರಾಗಲು ಈ ನಿರ್ದೇಶನಗಳು ಅನ್ವಯಿಸುತ್ತವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.

ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿಯ ಭೀಕರತೆ ದೃಷ್ಟಿಯಿಂದ ವಿದೇಶದಿಂದ ರಾಜ್ಯಕ್ಕೆ ಆಗಮಿಸುವವರ ಪ್ರಯಾಣದ ಸಂಪೂರ್ಣ ವಿವರಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸುವುದು ಮತ್ತು ಯಾವುದೇ ಲೋಪವಿಲ್ಲದೆ ಕೋವಿಡ್‌ ನಿಯಮಾವಳಿಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಜಾಗರೂಕತೆಯನ್ನು ಬಲಪಡಿಸಲು ಎಲ್ಲಾ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *