ಬೆಂಗಳೂರು : ಒಳ ಮೀಸಲಾತಿ ಜಾರಿಗಾಗಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯ ಮೇಲೆ ಪೊಲೀಸರು ಲಾಠಿ ಬೀಸಿ ವಶಕ್ಕೆ ಪಡೆದರು.
ಸದಾಶಿವ ಆಯೋಗದ ವರದಿಯ ಶಿಫಾರಸುಗಳ ಜಾರಿಗೆ ಹರಿಹರದಲ್ಲಿನ ಬಿ.ಕೃಷ್ಣಪ್ಪ ಅವರ ಸಮಾಧಿ ಬಳಿಯಿಂದ ಹೊರಟು 360 ಕಿಲೋ ಮೀಟರ್ ಕ್ರಮಿಸಿ ಭಾನುವಾರ ಬೆಂಗಳೂರಿಗೆ ಬಂದಿದ್ದ ಸಾವಿರಾರು ಮಂದಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ಮುಂದುವರಿಸಿದ್ದರು. ಮನವಿ ಸ್ವೀಕರಿಸಲು ಬಂದಿದ್ದ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ‘ಗೋ ಬ್ಯಾಕ್’ ಘೋಷಣೆ ಕೂಗಿ ವಾಪಸ್ ಕಳುಹಿಸಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸ್ಥಳಕ್ಕೆ ಬರಬೇಕು. ಒಳ ಮೀಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ಸ್ಥಳಕ್ಕೆ ಬರದಿದ್ದರೆ ಮುಖ್ಯಮಂತ್ರಿ ಅವರ ಮನೆಯ ಬಳಿಗೆ ಹೋಗುವುದಾಗಿ ಎಚ್ಚರಿಸಿದರು. ಧರಣಿ ಕೈಬಿಡಲು ತಿಳಿಸಿದ ಪೊಲೀಸರು, ಇದಕ್ಕೆ ಒಪ್ಪದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್‌ಗಳಲ್ಲಿ ಕರೆದೊಯ್ದರು. ಪ್ರತಿಭಟನೆ ಮುಂದುವರಿಸಲು ಪ್ರಯತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಲಾಟಿ ಬೀಸಿ ಚದುರಿಸಿದರು.
ಈ ಸಂದರ್ಭದಲ್ಲಿ ಹೋರಾಟಗಾರ ಕರಿಯಪ್ಪ ಗುಡಿಮನಿ ಎಂಬವರ ತಲೆಗೆ ಪೆಟ್ಟುಬಿದ್ದಿದ್ದು, ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಹೋರಾಟಗಾರರು ಸಾಗಿಸಿದರು.
ಸಿದ್ದರಾಮಯ್ಯ ಖಂಡನೆ : ಒಳ ಮೀಸಲಾತಿ ಜಾರಿಗಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
‘ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ. ರಾಜ್ಯ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು’ ಎಂದು ಹೇಳಿದ್ದಾರೆ.
ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ. ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಬದ್ಧವಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ವರದಿಯನ್ನು ಒಪ್ಪಿಕೊಂಡು ಅದನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಘೋಷಿಸಿದ್ದಾರೆ.
ಕೋಮುವಾದಿ ಬಿಜೆಪಿ ಸರಕಾರಕ್ಕೆ ಧಿಕ್ಕಾರ !