ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಪುನಃ ಜಾರಿಗೆ ತರಬೇಕು ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಸಹ ಈ ಕುರಿತು ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಹಳೆ ಪಿಂಚಣಿ
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಯ ಪುನಃ ಜಾರಿ ಕುರಿತು ಚರ್ಚೆ ನಡೆಸಲು ಬೆಂಗಳೂರಿನಲ್ಲಿ ಜನವರಿ 5ರಂದು ಸಭೆಯನ್ನು ಕರೆದಿದ್ದಾರೆ. ಹಳೆ ಪಿಂಚಣಿ
ಶುಕ್ರವಾರ ಸಂಜೆ 5 ಗಂಟೆಗೆ ಹಣಕಾಸು ಇಲಾಖೆ ಅಧಿಕಾರಿಗಳು, ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯ ಬಳಿಕ ಕರ್ನಾಟಕ ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಸಂಬಂಧ ಮಹತ್ವದ ತೀರ್ಮಾನವನ್ನು ಪ್ರಕಟಿಸಲಿದೆಯೇ? ಎಂದು ಕಾದು ನೋಡಬೇಕಿದೆ.
ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ತೇಜ ಈ ಕುರಿತು ಮಾತನಾಡಿದ್ದಾರೆ. “ಕಳೆದ 10 ವರ್ಷಗಳಿಂದ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು ನಿರಂತರವಾಗಿ ಹೋರಾಟವನ್ನು ಮಾಡಲಾಗುತ್ತಿದೆ. ಜನವರಿ 5ರಂದು ಮುಖ್ಯಮಂತ್ರಿಗಳ ಜೊತೆ ನಡೆಯುವ ಸಭೆಯ ಬಳಿಕ ಫಲಿತಾಂಶ ಹೊರ ಬೀಳಲಿದೆ” ಎಂದು ಹೇಳಿದ್ದಾರೆ.
ಇದನ್ನು ಓದಿ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ನಾಲ್ವರ ಗುಂಡಿಕ್ಕಿ ಹತ್ಯೆ, 5 ಜಿಲ್ಲೆಗಳಲ್ಲಿ ಕರ್ಫ್ಯೂ
“ಜನವರಿ 5ರ ಶುಕ್ರವಾರ ಮುಖ್ಯಮಂತ್ರಿಗಳು ಎನ್‌ಪಿಎಸ್ ನೌಕರರು ಹಾಗೂ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿಯೇ ರಾಜ್ಯಮಟ್ಟದ ಸಮಾವೇಶದ ದಿನಾಂಕವನ್ನು ಘೋಷಣೆ ಮಾಡಲಾಗುತ್ತದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಹೊಸ ಪಿಂಚಣಿ ಯೋಜನೆ ರದ್ದು ಮತ್ತು ಹಳೆಯ ಪಿಂಚಣಿ ಯೋಜನೆ ಪುನಃ ಜಾರಿ ಕುರಿತು ಘೋಷಣೆ ಮಾಡಲಿದ್ದಾರೆ” ಎಂದು ತಿಳಿಸಿದರು. ಪಿಂಚಣಿ
ಕರ್ನಾಟಕ ಸರ್ಕಾರ ಸರ್ಕಾರದ ಆದೇಶ ದಿನಾಂಕ 31/03/2006ರನ್ವಯ ದಿನಾಂಕ 01/04/2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯದ ಸ್ವಾಯತ್ತ ಸಂಸ್ಥೆಗಳು, ನಿಗಮ ಮಂಡಳಿಗಳು, ಸಂಘಗಳು, ವಿಶ್ವವಿದ್ಯಾನಿಲಯಗಳು, ರಾಜ್ಯದ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01/04/2006ರಿಂದ ಕಡ್ಡಾಯವಾಗಿ ಜಾರಿಗೆ ಬರುವಂತೆ ಸರ್ಕಾರದ ಸುತ್ತೋಲೆ ದಿನಾಂಕ 21/02/2015ರಲ್ಲಿ ವಿಸ್ತರಣೆ ಮಾಡಲಾಗಿದೆ.
ರಾಜ್ಯದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಒತ್ತಾಯಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರದ ಆದೇಶ ದಿನಾಂಕ 01/03/2023ರಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು, ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ. ಹಳೆ ಪಿಂಚಣಿ
ಅಲ್ಲದೇ ಏಕ ಸದಸ್ಯ ಸಮಿತಿಯ ಕಾರ್ಯ ವಿಳಂಬವಾಗುತ್ತಿರುವುದರಿಂದ ಈ ಸಮಿತಿಯನ್ನು ಪುನರ್ ರಚನೆ ಮಾಡಿ ಇನ್ನೂ ಹೆಚ್ಚಿನ ಸದಸ್ಯರನ್ನು ನೇಮಕ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ ಯಾವಾಗ ಹಳೆ ಪಿಂಚಣಿ ಯೋಜನೆ ಜಾರಿಗೆ ಬರುತ್ತದೆ ಎಂಬ ಬಗ್ಗೆ ಸರ್ಕಾರ ಇದುವುರೆಗೂ ಯಾವುದೇ ಮಾಹಿತಿಯನ್ನು ನೀಡಿಲ್ಲ.
ಕರ್ನಾಟಕ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಆದ್ದರಿಂದ ಈಗ ಸರ್ಕಾರಿ ನೌಕರರು ಸರ್ಕಾರ ಬೇಗ ತನ್ನ ಆದೇಶ ಹೊರಡಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.