ಬೆಂಗಳೂರು: ವಿದೇಶಗಳಲ್ಲಿ ಹೊಸತಳಿಯ ಓಮಿಕ್ರಾನ್ ವೈರಸ್ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಲ್ಲಿ ದೃಢೀಕರಣಗೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಸಭೆಯಲ್ಲಿ ಗಡಿ ಭಾಗದಲ್ಲಿ ಬಿಗಿ ಕ್ರಮಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮಹಾರಾಷ್ಟ್ರ, ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ರಾಜ್ಯದ ಗಡಿಯಲ್ಲಿ ದಿನದ 24 ಗಂಟೆ ಬಿಗಿ ಕ್ರಮಕ್ಕೆ ಸೂಚಿಸಿರುವ ಅವರು ಗಡಿಯಲ್ಲಿ ಸಿಬ್ಬಂದಿಗಳು ಪಾಳಿ ಸಮಯದಂತೆ ಕರ್ತವ್ಯ ನಿರ್ವಹಿಸಿ ಪರೀಕ್ಷೆಗಳನ್ನು ಮಾಡಲು ಸೂಚನೆ ನೀಡಲಾಗಿದೆ. ಲಸಿಕೆ ಪಡೆದುಕೊಂಡಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಸಹ ಸೂಚನೆ ನೀಡಿದ್ದಾರೆ.
ಡಿಸೆಂಬರ್ ಅಂತ್ಯದೊಳಗೆ 2 ಡೋಸ್ ಲಸಿಕೆ ಹಾಕುವ ಪ್ರಮಾಣವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಸಿಕೆ ಪಡೆಯದವರನ್ನ ಪತ್ತೆ ಹಚ್ಚುವಂತೆ ತಾಕೀತು ಮಾಡಿದ್ದಾರೆ.
ಸೋಂಕು ಹೆಚ್ಚಾಗುತ್ತಿರುವ ಪ್ರದೇಶಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಸಿಕೆ ನೀಡುವುದಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಕೆಲ ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚಾಗಲು ಕಾರಣವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಿ. ವಿದೇಶಿ ಪ್ರಜೆಗಳಿಗೆ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ಎಂದು ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಸದ್ಯ 0.42 ದೃಢೀಕೃತ ಪ್ರಕರಣಗಳು ಸಕ್ರಿಯವಾಗಿದೆ. ಧಾರವಾಡ ಜಿಲ್ಲೆ 1.82, ಮೈಸೂರು 1.08, ಉಡುಪಿ 0.42, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೃಢೀಕರಣಗೊಂಡ ಪ್ರಕರಣಗಳು 0.54, ಬೆಂಗಳೂರು ನಗರ ಜಿಲ್ಲೆಯಲ್ಲಿ 0.42 ಇದೆ.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥ್ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಸುದರ್ಶನ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.