ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ಪಕ್ಷಗಳ ನಾಯಕರು ಭಾಗಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ  ಮೇ 20ರಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನಿನ್ನೆ ರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು. ಬಲ್ಲ ಮೂಲಗಳ ಪ್ರಕಾರ ಸಿಎಂ ಮತ್ತು ಡಿಸಿಎಂ ಜೊತೆ ನಾಳೆ 20 ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ 10ರಿಂದ 15 ಅಥವಾ 20 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದಲ್ಲಿ ಸಚಿವ ಸ್ಥಾನ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿನಾನೇಕೆ ಅಸಮಾಧಾನಗೊಳ್ಳಬೇಕು? ನಾವು ಸಾಗಬೇಕಾದ ದಾರಿ ಬಹಳ ದೂರವಿದೆ : ಡಿಕೆ ಶಿವಕುಮಾರ್

ಸಿಎಂಗಳು, ಸಮಾನ ಪಕ್ಷಗಳ ನಾಯಕರು ಭಾಗಿ:  ಬೆಂಗಳೂರಿನಲ್ಲಿ ನಾಳೆ ಮಧ್ಯಾಹ್ನ ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಲವು ಮುಖ್ಯಮಂತ್ರಿಗಳು ಮತ್ತು ಪಕ್ಷದ ಮುಖಂಡರಿಗೆ ಆಹ್ವಾನವನ್ನು ನೀಡಿದ್ದಾರೆ ಎನ್ನಲಾಗಿದೆ. ಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ,  ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ.

ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ,  ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೂ ದೂರವಾಣಿ ಮೂಲಕ ಖರ್ಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿಯವರಿಗೂ ಆಹ್ವಾನ ನೀಡಲಾಗಿದೆ. ಆ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ಫಲಿತಾಂಶವನ್ನು ಲಾಭವಾಗಿಸುವ ಪ್ರಯತ್ನವನ್ನು ಖರ್ಗೆ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 

Donate Janashakthi Media

Leave a Reply

Your email address will not be published. Required fields are marked *