ಪಶ್ಚಿಮಘಟ್ಟ ಕರಡು ಅಧಿಸೂಚನೆಗೆ ವಿರೋಧ: ಜುಲೈ 18ಕ್ಕೆ ಮಲೆನಾಡು ಭಾಗದ ಶಾಸಕರ ಸಭೆ

ಬೆಂಗಳೂರು: ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಭಾಗದ ಶಾಸಕರ ಸಭೆಯನ್ನು ಕರೆಯಲಾಗಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದ್ದಾರೆ.  ಸಭೆಯಲ್ಲಿ ಕೇಂದ್ರ ಸರ್ಕಾರದ ಕರಡು ಅಧಿಸೂಚನೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ.

ಕೇಂದ್ರ ಸರ್ಕಾರ ಕಳೆದ ವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಸೇರಿದಂತೆ ಒಟ್ಟು 56,826 ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳ ಗಡುವು ನೀಡಲಾಗಿದೆ.

ಅಧಿಸೂಚನೆ ಏನಾದರೂ ಅನುಷ್ಠಾನಗೊಂಡಲ್ಲಿ ಮಲೆನಾಡು ನಿವಾಸಿಗಳ ಬದುಕು ಸಂಕಷ್ಟಕ್ಕೆ ಎಡೆ ಮಾಡಿಕೊಡಲಿದೆ, ಅಭಿವೃದ್ಧಿ ಕುಂಠಿತವಾಗುತ್ತವೆ. ಜತೆಗೆ ಜನ ತೀವ್ರ ಆರ್ಥಿಕ ತೊಂದರೆಗೂ ಒಳಗಾಗಲಿದ್ದಾರೆ. ಹಾಗಾಗಿ ಈ ಅಧಿಸೂಚನೆಯನ್ನು ಜಾರಿಮಾಡದಂತೆ ಕೇಂದ್ರವನ್ನು ಒತ್ತಾಯಿಸಲು ಈ ಸಭೆ ನಡೆಸಲಾಗುತ್ತದೆ. ಈ ಹಿಂದೆ ಕಸ್ತೂರಿರಂಗನ್ ಸಮಿತಿ ವರದಿಯನ್ನು ಸರ್ಕಾರ ತಿರಸ್ಕರಿಸಿತ್ತು.

ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದ್ದರು.

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಆ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಆ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.

ಈ ಭಾಗದ ಜನರು ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದ್ದಾರೆ. ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಈ ಮೂಲಕ ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಈ ಹಿಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *