ಮೈಸೂರು: ಈಗಾಗಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ-2020) ಮೊದಲ ಬ್ಯಾಚ್ ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಹಾಗಾಗಿ, ಈ ಕೂಡಲೇ ಎನ್‌ಇಪಿ-20 ಶೈಕ್ಷಣಿಕ ವಿಭಾಗದ ಪದವಿ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಅರ್ಗನೈಜೇಶನ್(ಎಐಡಿಎಸ್‌ಒ) ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಲು ಎಂದು ಘೋಷಣೆ ಕೂಗಿದರು. ಅಲ್ಲದೆ, ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಸಂಪೂರ್ಣವಾಗಿ ವಿತರಿಸಲು ಆಗ್ರಹಿಸಿದರು. ಬೇಡಿಕೆ ಇರುವಷ್ಟು ವಿದ್ಯಾರ್ಥಿ ವಸತಿ ನಿಲಯಗಳ ಸಂಖ್ಯೆ ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷರಾದ ಸುಭಾಷ್ ಮಾತನಾಡಿ ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ಬಹಳ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವೇತನವನ್ನು ಮೇಲೆ ಅವಲಂಬಿತರಾಗಿರುತ್ತಾರೆ. ವಿದ್ಯಾರ್ಥಿ ವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೇ ಕಷ್ಟಕರವಾಗುತ್ತದೆ. ಈ ಕೂಡಲೇ ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯದರ್ಶಿ ಮಂಡಳಿ ಸದಸ್ಯೆ ಸ್ವಾತಿ ಮಾತನಾಡಿ, ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಮೂಲಭೂತ ಅವಶ್ಯಕತೆಯಿದೆ. ಆದರೆ, ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳು ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳನ್ನು ಹೆಚ್ಚಿಸಬೇಕು ಮತ್ತು ದಾಖಲಾತಿಯನ್ನೂ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ವಿವಿಧ ಕಾಲೇಜುಗಳಿಂದ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದರು. ಪ್ರತಿಭಟನೆಯ ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ನಿತಿನ್ ಅಧ್ಯಕ್ಷತೆಯನ್ನು ವಹಿಸಿದ್ದು, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ , ಸಮಿತಿ ಸದಸ್ಯರುಗಳಾದ ಚಂದ್ರಿಕಾ, ಬಿ ಆರ್ ಚಂದನ, ಹೇಮಲತಾ, ವಿದ್ಯಾರ್ಥಿಗಳಾದ ಜೀವನ್, ಪ್ರಜ್ವಲ್, ತೇಜು, ಮೇಘನಾ, ಶಿವು, ಪ್ರಶಾಂತಿ, ಕೋಮಲ, ಶ್ರೇಯಸ್ ಮುಂತಾದವರು ಪಾಲ್ಗೊಂಡಿದ್ದರು.