ಲಖನೌ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಪಿ ಸ್ಪರ್ಧಿಸುವುದಾಗಿ ಪಕ್ಷದ ವರಿಷ್ಠೆ ಮಾಯಾವತಿ ತಿಳಿಸಿದ್ದಾರೆ.
ಈ ಹಿಂದೆ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಕಹಿ ಅನುಭವಹೊಂದಿದ್ದು, ಸ್ವಂತ ಸಾಮರ್ಥ್ಯದಿಂದ ಪಂಚ ರಾಜ್ಯಗಳ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಾಗಿ ಹೇಳಿದರು.
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿಯೂ ಬಿಎಸ್ ಪಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಅವರು ತಿಳಿಸಿದರು.
ಬಿಸ್ ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ 87ನೇ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಮಾಯಾವತಿ, ಚುನಾವಣೆ ನಿಟ್ಟಿನಲ್ಲಿ ಆಂತರಿಕವಾಗಿ ಕಾರ್ಯೋನ್ಮುಖವಾಗಿದ್ದೇವೆ. ಯಾವುದೇ ಕಾರ್ಯತಂತ್ರವನ್ನು ಬಹಿರಂಗಪಡಿಸುವುದಿಲ್ಲ, ಉತ್ತರ ಪ್ರದೇಶದಲ್ಲಿ ಎಲ್ಲಾ 403 ಕ್ಷೇತ್ರಗಳಲ್ಲಿ ಬಿಎಸ್ ಪಿ ಸ್ಪರ್ಧಿಸಲಿದ್ದೇವೆ. ಪಂಚಾಯತ್ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಪಡೆಯುವ ವಿಶ್ವಾಸವಿದೆ ಎಂದರು.
ಮೈತ್ರಿ ಮಾಡಿಕೊಂಡಲ್ಲಿ ನಮ್ಮ ಮತಗಳು ಇತರ ಪಕ್ಷಗಳಿಗೆ ವರ್ಗಾವಣೆಯಾಗುತ್ತವೆ. ಆದರೆ, ಇತರ ಪಕ್ಷಗಳ ಮತಗಳು ನಮ್ಮ ಪಕ್ಷಕ್ಕೆ ವರ್ಗಾವಣೆ ಆಗುವುದಿಲ್ಲ, ಇದೊಂದು ಅತ್ಯಂತ ಕಹಿ ಅನುಭವವಾಗಿದ್ದು, ಮುಂದೆ ಕೂಡಾ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ತಿಳಿಸಿದರು.