ಪರದೆಯಲ್ಲಿ ಮುಖ ತೋರ್ಸಿದ್ರೆ ಕೊರೊನಾ ಹೋಗಲ್ಲ ಪ್ರಧಾನಿಯವರೆ, ರಾಜ್ಯಗಳಿಗೆ ಆಕ್ಸಿಜನ್ ನೀಡಿ – ಸಿದ್ಧರಾಮಯ್ಯ

ಬೆಂಗಳೂರು : ಪ್ರಧಾನಿ‌ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್ ನಿಯಂತ್ರಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ ಮೋದಿಯವರೇ?

ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487. ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನಿಮಗೇನಾದರೂ ತಿಳಿಸಿದ್ದಾರೆಯೇ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಆಕ್ಸಿಜೆನ್ ಗಾಗಿ ಹಾಹಾಕಾರ. ಬೆಡ್‌ ಗಾಗಿ ಪರದಾಟ, ಇದು ಕರ್ನಾಟಕದ ಕರುಣಾಜನಕ ಕತೆ

ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ, ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ ಪ್ರಧಾನಿಯವರೇ ?

‘ಪರಿಸ್ಥಿತಿ ಕೈಮೀರಿಹೋಗಿದೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ. ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೊರೊನಾ ಸೋಂಕು ಮೀತಿಮೀರಿ ಹರಡುತ್ತಿರುವ ಈ ಸಂದರ್ಭದಲ್ಲಿ ಜನರ ಜೊತೆ ನಿಂತು ಆಸ್ಪತ್ರೆ, ಆಕ್ಸಿಜನ್, ಔಷಧಿಗಳು, ಆಂಬ್ಯುಲೆನ್ಸ್ ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಬೇಕು ಹಾಗೂ ಅಗತ್ಯ ಪಡಿತರ ವಸ್ತುಗಳ ವಿತರಣೆ ಮಾಡಿ ನೊಂದ ಜನರಿಗೆ ನೆರವಾಗಬೇಕು ಎಂದು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಕರೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *