ಬೆಂಗಳೂರು: ಯಾವುದೇ ಸಂಸ್ಥೆಯು ಪರವಾನಗಿ ಇಲ್ಲದೆ ಸಾರಿಗೆ ಸೇವೆಯನ್ನು ನಡೆಸಬಾರದು. ಹಾಗೊಂದು ವೇಳೆ ನಡೆಸುತ್ತಿದ್ದರೆ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಯಾಣಿಕರಿಂದ ಹೆಚ್ಚು ದರ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಓಲಾ, ಊಬರ್ ಸಂಸ್ಥೆಗಳಿಗೆ ಈಗಾಗಲೇ ಸಾರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಈ ಸಮಸ್ಯೆ ಕುರಿತಂತೆ ನಿನ್ನೆ ಸಾರಿಗೆ ಇಲಾಖೆ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ.
ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳದ ಬೆನ್ನಲ್ಲೇ ಒಕ್ಕಲಿಗ ಸೇರಿದಂತೆ ಇತರೆ ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಜವಾಗಿ ಎಲ್ಲರೂ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಡುತ್ತಾರೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಎಲ್ಲ ವಿಷಯಗಳನ್ನು ಪರಿಶೀಲಿಸುತ್ತಿದೆ. ಆಯೋಗದ ಶಿಫಾರಸ್ಸು, ತಜ್ಞರು ನೀಡುವ ಸಲಹೆ ಆಧರಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳದ ಬಗ್ಗೆ ಕಾನೂನಾತ್ಮಕ ರಕ್ಷಣೆ ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಪವರ್ ಸ್ಟಾರ್ ಪುನೀತ್‍ರಾಜ್‍ಕುಮಾರ್ ಅಭಿನಯದ ಸಿನಿಮಾ ಗಂಧದಗುಡಿ ಪೂರ್ವ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ನಟ ರಾಘವೇಂದ್ರ ರಾಜ್‍ಕುಮಾರ್ ಆಗಮಿಸಿದ್ದ ಬಗ್ಗೆಯೂ ವಿವರಿಸಿದರು.