- ವಸ್ತುನಿಷ್ಠ ವರದಿ ಮಾಡಲು ತೆರಳಿದ ಪತ್ರಕರ್ತರ ಮೇಲೆ ದುವರ್ತನೆ ತೋರಿದ ಕಾಲೇಜು ವಿಧ್ಯಾರ್ಥಿಗಳು
- ಪ್ರಕರಣದಲ್ಲಿ ಭಾಗಿಯಾಗಿರುವವರ ಮೇಲೆ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು: ಉಪ್ಪಿನಂಗಡಿ ಸರಕಾರಿ ಕಾಲೇಜಿನ ಹಿಜಾಬ್ ವಿವಾದದ ವಸ್ತುನಿಷ್ಟ ವರದಿಗೆ ತೆರಳಿದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದ್ದು, ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಕಾಲೇಜಿಗೆ ಪತ್ರಕರ್ತರು ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ಪತ್ರಕರ್ತರಿಗೆ ದುವರ್ತನೆ ತೋರಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕು ಹಾಗು ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಮತ್ತು ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಭಗವಾನ್ ಹೃಷಿಕೇಶ್ ಸೋನಾವಣೆ ಅವರಿಗೂ ಮನವಿ ಸಲ್ಲಿಸಲಾಗಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷರಾದ ಭಾಸ್ಕರ ರೈ ಕಟ್ಟ, ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸದಸ್ಯರಾದ ವಿಲ್ಫ್ರೆಡ್, ಭರತ್ ರಾಜ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರೀಫ್ ಪಡುಬಿದ್ರೆ, ಸದಸ್ಯರಾದ ಕಿಶನ್, ಅಶೋಕ್ ಪೂಜಾರಿ ಇದ್ದರು.