ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ವಿರುದ್ಧ ಪೋಸ್ಟ್ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆʼʼ ಎಂದು ಟ್ವೀಟ್ ಮಾಡಿದ ಚೇತನ್ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದಲ್ಲಿ ಸೋಮವಾರ ಬೆಳಗ್ಗೆ ಚೇತನ್ ಅವರನ್ನು ಬಂಧಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. 32ನೇ ಎಸಿಎಂಎಂ ನ್ಯಾಯಾಲಯವು ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾಮೀನು ಕೋರಿ ಅರ್ಜಿ:
ಇದೇ ವೇಳೆ ನಟ ಚೇತನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. “ಹಿಂದುತ್ವ ವಿರೋಧಿ ಪೋಸ್ಟ್ʼʼ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಎನ್ನಲು ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದರು. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದರು.
ಪೋಸ್ಟ್ ನಲ್ಲಿ ಏನಿದೆ.? :
• ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ.
ಸಾವರ್ಕರ್ ಹೇಳಿಕೆಯಾದ ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದುರಿಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು- ಇದೊಂದು ಸುಳ್ಳು.
• 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮಭೂಮಿ- ಇದು ಒಂದು ಸುಳ್ಳು.
• ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು.
• ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು- ಸತ್ಯವೇ ಸಮಾನತೆ
“ಆ ದಿನಗಳುʼʼ ಖ್ಯಾತಿಯ ಚೇತನ್ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆಂದು ದೂರಿ ಶಿವಕುಮಾರ್ ಎನ್ನುವವರು ದೂರು ದಾಖಲಿಸಿದ್ದರು. ಈ ದೂರಿನ ಬೆನ್ನಲ್ಲೇ ಶೇಷಾದ್ರಿಪುರಂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ನಂತರ ನಟ ಚೇತನ್ ಅವರನ್ನು ಮಂಗಳವಾರ ಬೆಳಗ್ಗೆ ಬಂಧನ ಮಾಡಿದ ಪೊಲೀಸರು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು.