ನವದೆಹಲಿ: ಚುನಾವಣಾ ಆಯೋಗಕ್ಕೆ ತಪ್ಪು ದಾಖಲೆಗಳನ್ನು ನೀಡಿ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆ ನಡೆಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ದೂರು ದಾಖಲಾಗಿ ಮೂರು ವರ್ಷದ ನಂತರ ಈಗ ಪ್ರಜ್ವಲ್ ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ತನಿಖೆಯಾಗಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
15ನೇ ವಯಸ್ಸಿನಲ್ಲಿ 23 ಕೋಟಿ ಆಸ್ತಿ ಹೊಂದಿದ್ದಾರೆ. ಈ ಆಸ್ತಿ ವಿವರದ ಬಗ್ಗೆ ಐಟಿಗೆ ಮಾಹಿತಿ ಸಲ್ಲಿಕೆ ಮಾಡಿಲ್ಲ, ಚುನಾವಣಾ ಆಯೋಗಕ್ಕೂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಕೀಲ ದೇವರಾಜೇಗೌಡ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದರು.
ಈ ಆರೋಪ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಮೂರ್ತಿ ಸಂಜಯ್ ಕಿಷನ್ ಕೌಲ್ ಹಾಗು ನ್ಯಾಯಮೂರ್ತಿ ಸುಂದರೇಶ್ ನೇತೃತ್ವದ ಪೀಠ ಇದರ ವಿಚಾರಣೆ ನಡೆಸಿ, ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಬಹುದೆಂದು ಆದೇಶ ನೀಡಿದೆ.
2019ರಲ್ಲಿ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ನಾಮಪತ್ರದೊಂದಿಗೆ ಸಲ್ಲಿಸಲಾಗಿದ್ದ ಆಸ್ತಿ ವಿವರದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇದನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದರ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ , ಮತ್ತೆ ಅರ್ಜಿ ಪಡೆದು ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಸೂಚಿಸಿದೆ. ಅಲ್ಲದೆ, ಎ.ಮಂಜು ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನೂ ನೀಡಿದೆ.