ಬೆಂಗಳೂರು: ಕೋವಿಡ್ ದೃಢೀಕೃತ ಪ್ರಕರಣಗಳ ಪ್ರಮಾಣ ಶೇಕಡಾ ಎರಡಕ್ಕಿಂತ ಕಡಿಮೆ ಇರುವ ಎಲ್ಲಾ ತಾಲ್ಲೂಕುಗಳಲ್ಲಿಯೂ 6, 7, 8ನೇ ತರಗತಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಆರನೇ ತಾರೀಖಿನಿಂದ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ಸಭೆಯ ಬಳಿಕ ತೀರ್ಮಾನಗಳನ್ನು ಪ್ರಕಟಿಸಿದ ಕಂದಾಯ ಸಚಿವ ಆರ್. ಅಶೋಕ ‘ಪ್ರತಿ ತರಗತಿಯ ವಿದ್ಯಾರ್ಥಿಗಳನ್ನು ಎರಡು ಗುಂಪುಗಳಾಗಿ ಮಾಡಲಾಗುವುದು. ದಿನ ಬಿಟ್ಟು ದಿನ ತರಗತಿ ನಡೆಸಲಿದ್ದು, ವಾರದಲ್ಲಿ ಐದು ದಿನಗಳು ಮಾತ್ರ ಶಾಲೆಗಳು ತೆರೆಯಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳು ನಡೆಯಲಿವೆ. ಶನಿವಾರ ಮತ್ತು ಭಾನುವಾರ ಶಾಲಾ ತರಗತಿಗಳನ್ನು ಸ್ಯಾನಿಟೈಸ್ ಮಾಡಲು ತೀರ್ಮಾನಿಸಲಾಗಿದೆʼ ಎಂದು ತಿಳಿಸಿದರು.
ಇದನ್ನು ಓದಿ: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ಭೌತಿಕ ತರಗತಿಗಳಿಗೆ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಶಾಲಾ-ಕಾಲೇಜುಗಳಲ್ಲಿ ಹಾಜರಾತಿ ಕಡಿಮೆ ಇದೆ. ತರಗತಿಗಳಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಪ್ರಕರಣಗಳ ಸಂಖ್ಯೆಯೂ ತೀರಾ ಕಡಿಮೆ ಇದೆ ಎಂದು ವಿವರಿಸಿದರು.
ರಾಜ್ಯದ 2,912 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. 6,472 ವಿದ್ಯಾರ್ಥಿಗಳ ಗಂಟಲು ಮತ್ತು ಮೂಗಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. 14 ವಿದ್ಯಾರ್ಥಿಗಳಲ್ಲಿ ಮಾತ್ರ ಕೋವಿಡ್ ದೃಢಪಟ್ಟಿದೆ ಎಂದು ವಿವರ ನೀಡಿದರು.
ಸಾರ್ವಜನಿಕ ಗಣೇಶೋತ್ಸವ: ಸಾರ್ವಜನಿಕವಾಗಿ ಹಮ್ಮಿಕೊಳ್ಳಾಗುವ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಅನುಮತಿ ಸಂಬಂಧಿಸಿದಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಕುರಿತು ಮತ್ತೊಮ್ಮೆ ಸೆಪ್ಟೆಂಬರ್ 5ರಂದು ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. ಅಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ ತಿಳಿಸಿದರು.
ಇದನ್ನು ಓದಿ: ಪಠ್ಯಪುಸ್ತಕ ನೀಡದೆ ಶಾಲೆ ಆರಂಭಿಸಿದ್ದು ಯಾಕೆ? ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ?
‘ಭಾವನಾತ್ಮಕವಾದ ಆಚರಣೆಯಾಗಿರುವ ಈ ಉತ್ಸವವನ್ನು ನಡೆಸುವ ಬಗ್ಗೆ ಬೃಹತ್ ಪ್ರಮಾಣದ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಂಘಸಂಸ್ಥೆಗಳೊಂದಿಗೆ ಸಮಗ್ರವಾಗಿ ಸಮಾಲೋಚನೆ ನಡೆಸಲು ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳಿಗೆ ಸೂಚಿಸಲಾಗಿದೆ. ಅವರು ನೀಡುವ ವರದಿ ಪಡೆದ ಬಳಿಕ, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು’ ಎಂದು ಹೇಳಿದರು.
ಕರ್ನಾಟಕದ ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಜನರ ಆರೋಗ್ಯ ಮತ್ತು ಪ್ರಾಣ ಮುಖ್ಯವಾಗಿದ್ದು, ಎಲ್ಲವನ್ನೂ ಗಂಭೀರವಾಗಿ ಪರಿಗಣಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಲ್ಯಾಣ ಮಂಟಪ ತೆರೆಯಲು ಅನುಮತಿ: ಮದುವೆ ಮತ್ತಿತರ ಸಮಾರಂಭಗಳಿಗಾಗಿ ಕಲ್ಯಾಣ ಮಂಟಪಗಳಲ್ಲಿ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ. ಗರಿಷ್ಠ 400 ಜನರ ಮಿತಿಗೆ ಒಳಪಟ್ಟು, ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಿ ಸಭೆ, ಸಮಾರಂಭಗಳನ್ನು ನಡೆಸಲು ಒಪ್ಪಿಗೆ ನೀಡಲಾಗುವುದು ಎಂದು ಪ್ರಕಟಿಸಿದರು.
ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೊಡಗು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯದ ಕರ್ಫ್ಯೂ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಈ ನಿರ್ಬಂಧ ಸಡಿಲಿಸಲಾಗುವುದು ಎಂದು ತಿಳಿಸಿದರು.
ಕೇರಳದಿಂದ ಬರುವ ಎಲ್ಲರಿಗೂ ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗುವುದು ಎಂದರು.